ಶಬ್ದಪಾರಮಾರ್ಗಮಶಕ್ಯಂ

Update: 2019-01-26 19:10 GMT

ಡಾ. ವಿಜಯ್ ಪೂಣಚ್ಚ

ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾನಿಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾನಿಲಯದ ಹರವು ವಿಸ್ತಾರವಾದದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾನಿಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾನಿಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕತ್ವದ ‘ವಿಕಾಸ’ ಈ ವಿಶ್ವವಿದ್ಯಾನಿಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜೀವನ ತತ್ವದ ಪರವಾಗಿರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ: ದೇಸಿ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳೆಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳಿವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ್ತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ತೊಡಗಿಸಿಕೊಂಡ ಈ ವಿದ್ವತ್‌ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲಘಟ್ಟದಲ್ಲಿ ಸಕಾಲಿಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶ್ರೀಲತೆಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ ಭಾಷಾನೀತಿ, ಭಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ.

ನಮ್ಮೆದುರು ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶ್ರೀಯ ಜ್ಞಾನಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕೃಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶಿ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾನಿಲಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶ್ರೀಲ ಪ್ರಕ್ರಿಯೆಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಾಡು ನುಡಿಯನ್ನು ಹೊಸದಾಗಿ ಶೋಧಿಸುತ್ತಾ ವಿವರಿಸುತ್ತಾ ಬಂದಿದೆ. ಅಂದರೆ: ಕನ್ನಡ ಅರಿವಿನ ವಿಕೇಂದ್ರೀಕರಣವೇ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾನಿಲಯದ ಜೀವಧಾತುವಾಗಿದೆ.

ಚರಿತ್ರೆ ರಚನಾಶಾಸ್ತ್ರದಲ್ಲಿ ಕಳೆದ ಮೂರು ದಶಕಗಳಿಂದ ಪ್ರಭಾವಿಯಾಗಿರುವ ಚರಿತ್ರೆ ಬರವಣಿಗೆ ಕ್ರಮವಾದ ಸಬಾಲ್ಟರ್ನ್ ಅಧ್ಯಯನಕ್ರಮವು ಅಭಿವೃದ್ಧಿ ಹೊಂದುತ್ತಿರುವ ಭಾರತದಂತಹ ದೇಶಗಳ ಚರಿತ್ರೆಯನ್ನು ಪುನಾರಚಿಸಲು ಪ್ರಯತ್ನಿಸಿರುವುದನ್ನು ಡಾ. ವಿಜಯ್ ಪೂಣಚ್ಚ ತಂಬಂಡ ಅವರು ಪ್ರಸ್ತುತ ಕೃತಿಯಲ್ಲಿ ವಿವರಿಸಲು ಪ್ರಯತ್ನಿಸಿದ್ದಾರೆ. ಈಗಾಗಲೇ ‘ಒಪ್ಪಿತವಾಗಿರುವ’ ಚರಿತ್ರೆಯಲ್ಲಿ ದಾಖಲಾಗದ ಭಾರತದ ಬಹುಸಂಖ್ಯಾತ ರೈತರ/ಜನಸಾಮಾನ್ಯರ ಸಂವೇದನೆ ಮತ್ತು ಪ್ರತಿಭಟನೆಗಳು ಯುರೋಪಿಯನ್ ಕೇಂದ್ರಿತ ವಿದ್ವತ್ ವಲಯಗಳು ರೂಪಿಸಿದ ಬೌದ್ಧಿಕತೆಗೆ ಅಥವಾ ಅದರಿಂದ ಪ್ರಭಾವಕ್ಕೊಳಗಾದ ಸಿದ್ಧಾಂತಗಳಿಗೆ ಸಾಧ್ಯವಾಗಿಲ್ಲ ಎಂಬುದನ್ನು ಸಬಾಲ್ಟರ್ನ್ ಅಧ್ಯಯನವು ನಿರೂಪಿಸಿದೆ. ಕೆಳವರ್ಗದ ಸಂವೇದನೆ ಮತ್ತು ಪ್ರತಿಭಟನೆಗಳನ್ನು ಅರ್ಥ ಮಾಡಿಕೊಳ್ಳಲು ತಳದಿಂದ ಚರಿತ್ರೆ ನೋಡುವ ಕ್ರಮವನ್ನು ಪ್ರಸ್ತುತ ಅಧ್ಯಯನವು ಎತ್ತಿ ಹಿಡಿದಿದೆ. ಭಾರತದ ಚರಿತ್ರೆಯನ್ನು ಪುನಾರಚಿಸುವ ಸಂದರ್ಭದಲ್ಲಿ ಪ್ರಭಾವಿ ಪಾತ್ರವನ್ನು ವಹಿಸಿದ ಸಬಾಲ್ಟರ್ನ್ ಅಧ್ಯಯನ ಕ್ರಮವು ಇಂದು ಆಫ್ರಿಕಾದ ದೇಶಗಳ, ಲ್ಯಾಟಿನ್ ಅಮೆರಿಕ ಮಾತ್ರವಲ್ಲದೆ ಪಾಶ್ಚಾತ್ಯ ಜಗತ್ತಿನ ಬೌದ್ಧಿಕ ವಲಯಗಳಲ್ಲಿ ತನ್ನ ಪ್ರಭಾವವನ್ನು ಬೀರಿದೆ. ಕನ್ನಡದಲ್ಲಿ ಈ ಬೌದ್ಧಿಕ ವಲಯವನ್ನು ತಮ್ಮ ಕೃತಿಯ ಮೂಲಕ ಪರಿಚಯಿಸುತ್ತಿರುವ ಡಾ. ವಿಜಯ್ ಪೂಣಚ್ಚ ತಂಬಂಡ ಅವರು ಅಭಿನಂದನಾರ್ಹರು.

Writer - ಡಾ. ಎ. ಮುರಿಗೆಪ್ಪ

contributor

Editor - ಡಾ. ಎ. ಮುರಿಗೆಪ್ಪ

contributor

Similar News