ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ದೇವೇಗೌಡ ಜೊತೆ ಚರ್ಚೆ: ದಿನೇಶ್ ಗುಂಡೂರಾವ್

Update: 2019-02-19 14:14 GMT

ಬೆಂಗಳೂರು, ಫೆ.19: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಜೊತೆ ಬುಧವಾರ ಸೀಟುಗಳ ಹಂಚಿಕೆ ಕುರಿತು ಚರ್ಚೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

‘ನಾವೇನು ಭಿಕ್ಷುಕರಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೈಸೂರಿನಲ್ಲಿ ನೀಡಿರುವ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ದಿನೇಶ್ ಗುಂಡೂರಾವ್ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸೀಟುಗಳ ಹಂಚಿಕೆ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಮೊದಲು ಈ ಬಗ್ಗೆ ಚರ್ಚೆಯಾಗಬೇಕಿದೆ ಎಂದು ಅವರು ಹೇಳಿದರು.

ಇಂದು ಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಗುವಾಹಟಿಗೆ ಹೋಗಿದ್ದು, ನಾಳೆ ಸಂಜೆ ಅವರ ಜೊತೆ ಸೀಟುಗಳ ಹಂಚಿಕೆ ಸಂಬಂಧ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದರು.

ಎಪ್ರಿಲ್ ಮೊದಲ ಅಥವಾ ಎರಡನೆ ವಾರದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ. ಆದುದರಿಂದ, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಆದಷ್ಟು ಶೀಘ್ರದಲ್ಲಿ ಮಾಡಿ, ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. ಚುನಾವಣಾ ಪ್ರಚಾರ ಕೈಗೊಳ್ಳಲು ಅಭ್ಯರ್ಥಿಗಳಿಗೆ ಕನಿಷ್ಠ ಒಂದು ತಿಂಗಳಾದರೂ ಕಾಲಾವಕಾಶ ಬೇಕು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಅಭ್ಯರ್ಥಿಗಳ ಹೆಸರನ್ನು ತಡವಾಗಿ ಘೋಷಿಸಿದರೆ, ಅವರು ಕ್ಷೇತ್ರದಲ್ಲಿ ಸಂಚರಿಸಿ ಪ್ರಚಾರ ಮಾಡುವುದು ಕಷ್ಟವಾಗುತ್ತದೆ. ಇದೇ ವಿಚಾರವು ನಿನ್ನೆ ನಡೆದ ನಮ್ಮ ಪಕ್ಷದ ಸಮನ್ವಯ ಸಮಿತಿ ಸಭೆಯಲ್ಲೂ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News