ರೈತರ ವಲಸೆಯಿಂದಾಗಿ ಕೃಷಿ ಕ್ಷೇತ್ರಕ್ಕೆ ಪೆಟ್ಟು: ಸಚಿವ ಶಿವಶಂಕರರೆಡ್ಡಿ

Update: 2019-02-22 14:37 GMT

ಬೆಂಗಳೂರು, ಫೆ.22: ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ಜನರು ನಗರಗಳಿಗೆ ವಲಸೆ ಬರುತ್ತಿರುವುದರಿಂದ ಕೃಷಿ ಕ್ಷೇತ್ರಕ್ಕೆ ತೀವ್ರವಾದ ಪೆಟ್ಟು ಬೀಳುತ್ತಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರೆಡ್ಡಿ ಹೇಳಿದ್ದಾರೆ.

ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗ ಹಾಗೂ ಬೆಂಗಳೂರು ಕ್ಯಾಸೆಲ್, ಜರ್ಮನಿ ಮತ್ತು ಗೋಟ್ಟಿಂಗನ್ ವಿವಿ ಸಹಭಾಗಿತ್ವದಲ್ಲಿ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಇಂಡೋ-ಜರ್ಮನ್ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಾದ್ಯಂತ ನಗರೀಕರಣದ ಪ್ರಭಾವದಿಂದಾಗಿ ಗ್ರಾಮೀಣ ಪ್ರದೇಶದ ಕೃಷಿ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳ ಮೇಲೆ ಹೊಡೆತ ಬೀಳುತ್ತಿದೆ. ಅಲ್ಲದೆ, ನಗರಕ್ಕೆ ಬರುತ್ತಿರುವ ಜನತೆ ಅತ್ಯಂತ ಸಂಕಷ್ಟದ ಸ್ಥಿತಿಯಲ್ಲಿ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಹಳ್ಳಿಗಳಿಂದ ನಗರಕ್ಕೆ ವಲಸೆ ಬರುತ್ತಿರುವವರಿಗೆ ಹಳ್ಳಿಗಳಲ್ಲೇ ಸೂಕ್ತ ಮೂಲ ಸೌಕರ್ಯಗಳನ್ನು ಒದಗಿಸುವ ಅವಶ್ಯಕತೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನ ಕೃಷಿ ಕ್ಷೇತ್ರದಿಂದಲೂ ವಿಮುಖರಾಗುತ್ತಿದ್ದಾರೆ. ಕೃಷಿ ಭೂಮಿಯನ್ನು ಸೈಟುಗಳಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ. ಕೃಷಿಕರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುವಂತಾದರೆ ಈ ವಾತಾವರಣ ಬದಲಾಗಬಹುದು ಎಂದು ಅವರು ತಿಳಿಸಿದರು.

ಕೃಷಿ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಆಧಾರವಾಗಿಟ್ಟುಕೊಂಡು, ಅದರ ಪರಿಹಾರಕ್ಕೆ ಬೆಂಗಳೂರು-ಜರ್ಮನ್‌ಗಳು ಕಳೆದ ಮೂರು ವರ್ಷಗಳಿಂದ ಮಾಡಿರುವ ಸಂಶೋಧನೆಗಳು ಬಹಳಷ್ಟು ಸಹಕಾರಿಯಾಗಿದೆ. ಈ ರೀತಿಯ ಹೊಸ ಸಂಶೋಧನೆಗಳಿಗೆ ಸರಕಾರ ಸಹಕಾರ ನೀಡುತ್ತದೆ. ಆಧುನಿಕತೆಗೆ ತಕ್ಕಂತೆ ಹೊಸ ಹೊಸ ಸಂಶೋಧನೆಗಳ ಮೂಲಕ ಕೃಷಿ ಕ್ಷೇತ್ರವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ರಾಜ್ಯದಾದ್ಯಂತ ಕೃಷಿ ಪದ್ಧತಿಯಲ್ಲಿ ಹೊಸ ಸಂಶೋಧನೆಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸುತ್ತೇವೆ. ನೂತನ ಕೃಷಿ ಪದ್ಧತಿಗಳನ್ನು ಪರಿಚಯಿಸುವ ಮೂಲಕ ಗ್ರಾಮೀಣ ಪ್ರದೇಶದ ಕೃಷಿಕರು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಬೆಂಗಳೂರು ಕೃಷಿ ವಿವಿಯ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್ ಮಾತನಾಡಿ, ವನ್ಯಜೀವಿಗಳು ನಗರ ಪ್ರದೇಶಕ್ಕೆ ಬರಬಾರದು ಎನ್ನುವ ಉದ್ದೇಶದಿಂದ ಬ್ಯಾರಿಕೇಡ್‌ಗಳನ್ನು ಅಳವಡಿಸಿದರೆ ಸಾಲದು, ಅವುಗಳ ಸಮಸ್ಯೆಗಳನ್ನು ಅರಿತುಕೊಂಡು ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ನುಡಿದರು.

ಕಂಪನಿಗಳು ಎಲ್ಲ ಕ್ಷೇತ್ರದಲ್ಲಿಯೂ ಬಂಡವಾಳ ಹೂಡಿಕೆ ಮಾಡುತ್ತಿವೆ. ಅದೇ ರೀತಿಯಲ್ಲಿಯೂ ಕೃಷಿ ಕ್ಷೇತ್ರದಲ್ಲಿಯೂ ಬಂಡವಾಳ ಹೂಡಿಕೆ ಮಾಡುವ ಮೂಲಕ ಕೃಷಿಯನ್ನು ಜೀವಂತವಾಗಿಡಲು ಮುಂದಾಗಬೇಕು. ಆಗ ಅಷ್ಟೇ ಕೃಷಿಯಲ್ಲಿ ಏನಾದರೂ ಬದಲಾವಣೆ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಇಂಡೋ-ಜರ್ಮನ್ ಸಂಶೋಧನೆಯ ಸಂಯೋಜಕ ಡಾ.ಕೆ.ಬಿ ಉಮೇಶ್, ಕೃಷಿ ಸಂಶೋಧನಾ ನಿರ್ದೇಶಕ ಡಾ.ವೈ.ಜಿ ಷಡಕ್ಷರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News