ಮೈಸೂರು-ಕೊಡಗು ಲೋಕಸಭಾ ಸಮರಕ್ಕೆ ಕಾಂಗ್ರೆಸ್‍ನಲ್ಲಿ ಹೆಚ್ಚಿದ ಆಕಾಂಕ್ಷಿಗಳು
ಮೈಸೂರು,ಮಾ.7: ಮುಂಬರುವ ಲೋಕಸಭಾ ಚುನಾವಣೆಗೆ ತಯಾರಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಲಿದ್ದು, ಮಾಜಿ ಸಚಿವ ಸಿ.ಎಚ್ ವಿಜಯಶಂಕರ್ ಮತ್ತು ದಿ.ಡಿ ದೇವರಾಜು ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ನಡುವೆ ಬಾರೀ ಪೈಪೋಟಿ ಏರ್ಪಟ್ಟಿದೆ.
ರಾಜ್ಯ ರಾಜಕಾರಣದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮಹತ್ವ ಪಡೆದು ಕೊಂಡಿದೆ. ಕಾರಣ ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ತವರು ಜಿಲ್ಲೆ. ಈ ಕ್ಷೇತ್ರ ಹಿಂದಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಪ್ರಮುಖವಾಗುತ್ತಿದೆ.
ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ಮಾತು ಇತ್ತೀಚೆಗೆ ಕೇಳಿ ಬರುತ್ತಿದೆ.
ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸಚಿವ ಜಿ.ಟಿ.ದೇವೇಗೌಡ ನಿಖಿಲ್ ಅವರನ್ನು ಮೈಸೂರಿನಿಂದ ಸ್ಪರ್ಧೆ ಮಾಡುವಂತೆ ಹೇಳಿದ್ದರು. ಇದು ಜೆಡಿಎಸ್ ನಾಯಕರಲ್ಲಿ ಮತ್ತಷ್ಟು ಇಂಬು ನೀಡಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೆ ಮೈಸೂರಿನಿಂದ ಕಣಕ್ಕಿಳಿಯಲಿ ಎಂಬ ಮಾತುಗಳು ಗಟ್ಟಿಗೊಳ್ಳುತ್ತಲಿವೆ. ಈ ವಿಚಾರವನ್ನು ತಳ್ಳಿಹಾಕುವಂತಿಲ್ಲ. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಈಗಿನಿಂದಲೇ ತಯಾರಿ ನಡೆಸಿ ಎಂಬ ಸೂಚನೆಯನ್ನು ಇತ್ತೀಚೆಗೆ ನೀಡಿ ಹೋಗಿದ್ದಾರೆ.
ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಿ.ಎಚ್.ವಿಜಯಶಂಕರ್ ಎರಡು ಬಾರಿ ಸಂಸದರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಇನ್ನೂ ಸೂರಜ್ ಹೆಗ್ಡೆ ಕ್ಷೇತ್ರದಲ್ಲಿ ಅಷ್ಟೊಂದು ಚಿರಪರಿಚಿತರಲ್ಲದಿದ್ದರೂ ಹೈಕಮಾಂಡ್ ಮಟ್ಟದಲ್ಲಿ ಉತ್ತಮ ಸಂಪರ್ಕವನ್ನು ಹೊಂದಿದ್ದಾರೆ. ಜೊತೆಗೆ ತಮ್ಮ ತಾತ ದಿ.ಡಿ.ದೇವರಾಜ ಅರಸು ಅವರ ಹೆಸರು ಇವರ ಬೆನ್ನಿಗಿದೆ.
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಶಾಸಕ ವಾಸು, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ, ಎಸಿಐಸಿಎಂ ಸಂಘಟನೆಯ ಎಂ.ಲಕ್ಷ್ಮಣ್, ಡಾ.ರವೀಂದ್ರ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ ಸಿ.ಎಚ್.ವಿಜಯ್ ಶಂಕರ್ ಮತ್ತು ಸೂರಜ್ ಹೆಗ್ಡೆ ಹೆಸರು ಅಂತಿಮವಾಗಿವೆ ಎಂದು ಮಾತುಗಳು ಬಲ್ಲಮೂಲಗಳಿಂದ ಕೇಳಿಬರುತ್ತಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿ.ಎಚ್.ವಿಜಯಶಂಕರ್ ಅವರ ಪರವಾಗಿದ್ದು, ಸೂರಜ್ ಹೆಗ್ಡೆ ದೆಹಲಿ ಮಟ್ಟದ ಕಾಂಗ್ರೆಸ್ ನಾಯಕರಲ್ಲಿ ಒತ್ತಡ ತರುತ್ತಿದ್ದಾರೆ ಎನ್ನಲಾಗಿದೆ. ಅಂತಿಮವಾಗಿ ಯಾರು ಈ ಕ್ಷೇತ್ರವನ್ನು ಗಿಟ್ಟಿಸಿಕೊಳ್ಳುತ್ತಾರೋ ಕಾದು ನೋಡಬೇಕಿದೆ.