ರಾಷ್ಟ್ರಮಟ್ಟದಲ್ಲಿ ಜಾತ್ಯತೀತ ಶಕ್ತಿಗಳ ಒಗ್ಗೂಡುವಿಕೆ ಅಗತ್ಯ: ಡಾ.ಕೆ.ರಹ್ಮಾನ್‌ ಖಾನ್

Update: 2019-03-15 14:05 GMT

ಬೆಂಗಳೂರು, ಮಾ.15: ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು, ಜಾತ್ಯತೀತ ಶಕ್ತಿಗಳು ಒಗ್ಗೂಡುವುದು ಅಗತ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಕೆ.ರಹ್ಮಾನ್‌ ಖಾನ್ ಪ್ರತಿಪಾದಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಬಿಎಸ್ಪಿ-ಎಸ್ಪಿ, ಬಿಹಾರದಲ್ಲಿ ಆರ್‌ಜೆಡಿ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಗಳು ತಮ್ಮ ಪ್ರತಿಷ್ಠೆಯನ್ನು ಬದಿಗೊತ್ತಿ, ದೇಶಕ್ಕಾಗಿ ಕಾಂಗ್ರೆಸ್ ಜೊತೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಸಮಾಜವನ್ನು ಧರ್ಮ, ಜಾತಿಯ ಆಧಾರದಲ್ಲಿ ವಿಭಜಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜಾತ್ಯತೀತ ಶಕ್ತಿಗಳೆಲ್ಲ ಒಟ್ಟಾಗಿ ಒಂದೇ ವೇದಿಕೆಗೆ ಬರಬೇಕಿದೆ. ದುರಾದೃಷ್ಟವಶಾತ್ ಕೆಲವು ಜಾತ್ಯತೀತ ಶಕ್ತಿಗಳು ಅಧಿಕಾರಕ್ಕಾಗಿ ತಮ್ಮ ಸಿದ್ಧಾಂತಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಜಾತ್ಯತೀತ ಪಕ್ಷಗಳು ಈಗಲೇ ಎಚ್ಚೆತ್ತುಕೊಂಡು ಸೂಕ್ತ ತೀರ್ಮಾನ ಕೈಗೊಳ್ಳದಿದ್ದರೆ ಉತ್ತರಪ್ರದೇಶ, ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅದರ ಲಾಭ ಪಡೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಜೊತೆಗೆ ಮುಸ್ಲಿಮರ ಪಕ್ಷ ಎಂದು ಬಿಂಬಿಸಿಕೊಳ್ಳುವ ಎಐಎಂಐಎಂ ಹಾಗೂ ಎಸ್‌ಡಿಪಿಐ ಪಕ್ಷಗಳು ಮತಗಳ ವಿಭಜನೆಗೆ ಕಾರಣವಾಗಬಹುದು ಎಂದು ರಹ್ಮಾನ್‌ ಖಾನ್ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದು, ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಇತ್ತೀಚೆಗಷ್ಟೇ ಮುಸ್ಲಿಮ್ ಮುಖಂಡರು ಸಭೆ ನಡೆಸಿ, ಕನಿಷ್ಠ 2-3 ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡುವಂತೆ ರಾಜ್ಯ ನಾಯಕರಿಗೆ ಮನವಿ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News