ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ಸಂಜೀವ್ ಕುಮಾರ್
ಬೆಂಗಳೂರು, ಮಾ.31: ಮತದಾನ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯುತ ಕರ್ತವ್ಯವಾಗಿದೆ. ಹೀಗಾಗಿ, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಾಮಾಣಿಕ, ನೈಜ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಕರೆ ನೀಡಿದ್ದಾರೆ.
ರವಿವಾರ ನಗರದ ಲಾಲ್ಬಾಗ್‌ನಲ್ಲಿರುವ ಗಾಜಿನ ಮನೆ ಬಳಿ ಚುನಾವಣಾ ಆಯೋಗ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬರಿಗೂ ಮತದಾನ ಮಾಡುವ ಹಕ್ಕು ಸಂವಿಧಾನ ಬದ್ಧವಾಗಿ ದೊರಕಿರುವುದು. ಅದನ್ನು ಎಲ್ಲರೂ ಸಮರ್ಪಕವಾಗಿ ಉಪಯೋಗಿಸಿಕೊಳ್ಳಬೇಕು. ನಮ್ಮ ದೇಶದಲ್ಲಿ ನಡೆಯುತ್ತಿರುವ ಅತಿದೊಡ್ಡ ಪ್ರಜಾಪ್ರಭುತ್ವ ಹಬ್ಬ ಇದಾಗಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ನುಡಿದರು.
ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಪ್ರಜೆಯೂ ಚುನಾವಣೆಯಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಕಣ್ಣಿಡಬೇಕು. ಎಲ್ಲಿಯಾದರೂ ಅಕ್ರಮಗಳು ನಡೆಯುತ್ತಿರುವ ಮಾಹಿತಿ ಕಂಡ ಕೂಡಲೇ ಚುನಾವಣಾ ಆಯೋಗಕ್ಕೆ ತಿಳಿಸಿ. ಚುನಾವಣಾ ಆಯೋಗದ ಸಿವಿಜಿಲ್, ಚುನಾವಣಾ ಆ್ಯಪ್, ಟೋಲ್ ಫ್ರೀ ಸಂಖ್ಯೆಯ ಮೂಲಕ ದೂರು ಸಲ್ಲಿಸಬಹುದು ಎಂದು ಅವರು ಮಾಹಿತಿ ನೀಡಿದರು.
ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಶೈಲೇಂದ್ರ ಕುಮಾರ್ ಮಾತನಾಡಿ, ರಾಜ್ಯದಲ್ಲಿಯೇ ಬೆಂಗಳೂರು ನಗರದ ಜನತೆ ಹೆಚ್ಚು ವಿದ್ಯಾವಂತರು ಎನ್ನಲಾಗುತ್ತದೆ. ಯಾರೂ ಆಮಿಷಗಳಿಗೆ ಬಲಿಯಾಗುವುದಿಲ್ಲ ಎಂಬ ನಂಬಿಕೆಯೂ ಇದೆ. ಆದರೂ, ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.
ಈ ಬಾರಿಯ ಪ್ರಜಾಪ್ರಭುತ್ವದ ಹಬ್ಬವಾದ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ವಿದ್ಯಾವಂತರು ಅವಿದ್ಯಾವಂತರಿಗೆ ತಿಳುವಳಿಕೆ ನೀಡುವ ಮೂಲಕ ಹೆಚ್ಚೆಚ್ಚು ಮತದಾನ ಆಗುವಂತೆ ನೋಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಭೃಂಗೀಶ್, ಬೆಂಗಳೂರು ನಗರ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್, ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಎಸ್.ಎಸ್.ಪ್ರಫುಲ್ಲ ಸೇರಿದಂತೆ ಮತ್ತಿತರರಿದ್ದರು. ಇದೇ ಸಂದರ್ಭದಲ್ಲಿ ಗುಜ್ಜಾರಪ್ಪತಂಡದವರಿಂದ ರೇಖೆಗಳಿಂದ ಚಿತ್ರಬಿಡಿಸಿ ಚುನಾವಣಾ ಮಹತ್ವದ ಬಗ್ಗೆ ಜಾಗತಿ ಮೂಡಿಸಿದರು. ಈ ರೇಖಾ ಚಿತ್ರಗಳು ಇನ್ನೂ ಎರಡು ದಿನ ಪ್ರದರ್ಶನಕ್ಕೆ ಇಡಲಾಗುತ್ತದೆ.