ಮುಂಗಾರು ಸಿದ್ಧತೆ: ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ

Update: 2019-04-29 04:18 GMT

ಬೆಂಗಳೂರು, ಎ.29: ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿ, ಕಳೆದ ವರ್ಷ ಮಳೆಗಾಲದಲ್ಲಿ ಕೊಡಗು ಸೇರಿದಂತೆ ಮಲೆನಾಡು, ಕರಾವಳಿ ಭಾಗಗಳಲ್ಲಿ ಭಾರೀ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಸಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. 

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿಧಿಗಳು ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವಕಾಶ ಇಲ್ಲದ ಕಾರಣ ಮುಖ್ಯ ಕಾರ್ಯದರ್ಶಿಗಳು ಅಧಿಕಾರಿಗಳ ತಂಡ ರಚಿಸಿ ಈ ಜಿಲ್ಲೆಗಳಲ್ಲಿ ಮುಂಗಾರಿನ ಪೂರ್ವಸಿದ್ಧತೆಯನ್ನು ಪರಿಶೀಲಿಸುವಂತೆ ತಿಳಿಸಿದ್ದಾರೆ.

ಅಲ್ಲದೆ ಕೊಡಗು ಜಿಲ್ಲೆಯಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಅನಾಹುತಗಳ ಹಿನ್ನೆಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಮೂಲಸೌಕರ್ಯ ಅಭಿವೃದ್ಧಿ, ದುರಸ್ತಿ ಹಾಗೂ ಪುನರ್ವಸತಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವನ್ನು ಖಾತರಿ ಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News