ಬಿಜೆಪಿಯ ಹಿರಿಯ ನಾಯಕ ಕೆ.ಜಿ.ಬೋಪಯ್ಯಗೆ ಸ್ಪೀಕರ್ ಹುದ್ದೆ
ಬೆಂಗಳೂರು, ಜು.29: ಬಿಜೆಪಿ ಹಿರಿಯ ಸದಸ್ಯ, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ನೂತನ ಸ್ಪೀಕರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಜು.30ರಂದು ಬೆಳಗ್ಗೆ 10.30ಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭೆ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಸ್ಪೀಕರ್ ಸ್ಥಾನಕ್ಕೆ ಪ್ರಮುಖವಾಗಿ ಕೆ.ಜಿ.ಬೋಪಯ್ಯ, ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಸುರೇಶ್ ಕುಮಾರ್ ಹೆಸರು ಮುಂಚೂಣಿಯಲ್ಲಿದ್ದವು. ಆದರೆ, ಅಂತಿಮವಾಗಿ ಕೆ.ಜಿ.ಬೋಪಯ್ಯರನ್ನು ಅಭ್ಯರ್ಥಿಯನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.
ಜಗದೀಶ್ ಶೆಟ್ಟರ್ ಮಾಜಿ ಮುಖ್ಯಮಂತ್ರಿಯಾಗಿರುವುದರಿಂದ, ಅವರನ್ನು ಸ್ಪೀಕರ್ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ದೇಶಿಸಿದ್ದರು. ಆದರೆ, ತನಗೆ ಸ್ಪೀಕರ್ ಆಗುವಲ್ಲಿ ಯಾವುದೇ ಆಸಕ್ತಿಯಿಲ್ಲ. ಯಡಿಯೂರಪ್ಪ ಸಂಪುಟದಲ್ಲಿ ಸಚಿವನಾಗಲು ನನಗೆ ಯಾವುದೇ ಅಭ್ಯಂತರವಿಲ್ಲ ಎಂಬ ಸಂದೇಶವನ್ನು ಜಗದೀಶ್ ಶೆಟ್ಟರ್ ವರಿಷ್ಠರಿಗೆ ರವಾನಿಸಿದ್ದಾರೆ ಎಂದು ಹೇಳಲಾಗಿದೆ.