ಧಾರವಾಡದಲ್ಲಿ ಧಾರಾಕಾರ ಮಳೆ: ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮಕ್ಕೆ ಸೂಚನೆ

Update: 2019-08-06 15:35 GMT

ಧಾರವಾಡ, ಆ.6: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಮಳೆ ಸುರಿಯುತ್ತಿದ್ದು ವಾಂತಿ, ಭೇದಿ ಹಾಗೂ ಇತರ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮಗಳು ಹಾಗೂ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಎಲ್ಲ ತಾಲೂಕುಗಳ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದೆ.

ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರಜೆ ಮಂಜೂರು ಮಾಡುವುದಿಲ್ಲ ಹಾಗೂ ವೈದ್ಯಾಧಿಕಾರಿಗಳಿಗೆ ಕೇಂದ್ರ ಸ್ಥಾನ ಬಿಡದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಎಲ್ಲ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದ ಔಷಧಿ ದಾಸ್ತಾನು ಇಟ್ಟುಕೊಳ್ಳಬೇಕು. ವಿಶೇಷವಾಗಿ ಹೆಲೊಜಿನ್, ಓಆರ್‌ಎಸ್, ಫ್ಲುಯಿಡ್ಸ್, ಮೆಟ್ರೊನೈಡಝೋಲ್ ಮತ್ತಿತರ ಅವಶ್ಯಕ ಔಷಧಿಗಳು ಅಗತ್ಯಕ್ಕನುಸಾರ ಕೂಡಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ತುರ್ತು ನಿಗಾ ತಂಡಗಳನ್ನು ರಚಿಸಲು ಸೂಚಿಸಲಾಗಿದೆ. ಸಾರ್ವಜನಿಕರು ಆರೋಗ್ಯ ಸಂಬಂಧಿತ ಸೇವೆಗಳಿಗೆ 0836-2447483 ಅಥವಾ 93422-80980ಗೆ ಸಂಪರ್ಕಿಸಬಹುದು ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News