ದಕ್ಷಿಣ ಒಳನಾಡಿನ ಹಲವೆಡೆ ಇನ್ನೂ ಎರಡು ದಿನ ಜಿಟಿ ಜಿಟಿ ಮಳೆ

Update: 2019-08-06 17:14 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.6: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಇನ್ನೂ ಎರಡು ದಿನಗಳ ಕಾಲ ಜಿಟಿ ಜಿಟಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸೋಮವಾರದಿಂದಲೂ ಬೆಂಗಳೂರು ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ದಕ್ಷಿಣ ಭಾಗದಲ್ಲಿ 2ರಿಂದ 3 ದಿನಗಳ ಕಾಲ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಆದರೆ, ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ 2-3 ದಿನಗಳಲ್ಲಿ ಇಳಿಕೆಯಾಗಲಿದೆ. ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಭಾಗದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಅರಬ್ಬಿಸಮುದ್ರದಲ್ಲಿ ಉಂಟಾಗಿರುವ ವಾತಾವರಣದಿಂದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿವೆ. ಮಲೆನಾಡು, ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ಜಲಾನಯ ಭಾಗದ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News