ರಜೆ ಘೋಷಣೆ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಿಮಿನಲ್ ಕೇಸ್: ಶಿವಮೊಗ್ಗ ಜಿಲ್ಲಾಧಿಕಾರಿ

Update: 2019-08-07 14:16 GMT
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಆ. 7: ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಸುಳ್ಳು ಸಂದೇಶ ಹರಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಸಿದ್ದಾರೆ. 

ಬುಧವಾರ ಕೆಲವರು ಆ. 7 ರಿಂದ 9 ರವರೆಗೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಸಿತ್ತು. 

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿಗಳು, 'ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ವಿಷಯಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು' ಎಂದು ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಮಳೆ ಹಾನಿ ಪರಿಹಾರ ಕಾರ್ಯವನ್ನು ಯುದ್ದೋಪಾದಿಯಲ್ಲಿ ಕೈಗೊಳ್ಳುವಂತೆ ಹಾಗೂ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ದವಾಗಿರುವಂತೆ ಎಲ್ಲ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಓಗಳಿಗೆ ವೀಡಿಯೋ ಕಾನ್ಪರೆನ್ಸ್ ಮೂಲಕ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News