ನಾನೀಗ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ: ಬಿ.ಸಿ.ಪಾಟೀಲ್

Update: 2019-08-10 16:42 GMT

ಬೆಂಗಳೂರು, ಆ. 10: ‘ನಮ್ಮನ್ನು ಉಚ್ಚಾಟನೆ ಮಾಡಲಾಗಿದ್ದು, ನಾನೀಗ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ’ ಎಂದು ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಶನಿವಾರ ಇಲ್ಲಿನ ಡಾಲರ್ಸ್‌ ಕಾಲನಿಯಲ್ಲಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅನರ್ಹತೆ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಮುಂದಿನ ವಾರ ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆಗಳಿವೆ ಎಂದರು.

ಸುಪ್ರೀಂ ಕೋರ್ಟ್‌ನಲ್ಲಿ ಅಯೋಧ್ಯೆ ಕುರಿತ ಅರ್ಜಿಗಳ ವಿಚಾರಣೆ ಹಿನ್ನೆಲೆಯಲ್ಲಿ ನಮ್ಮ ಅರ್ಜಿ ವಿಚಾರಣೆ ವಿಳಂಬ ಆಗುತ್ತಿದ್ದು, ಏನೇ ಆದರೂ ನಮಗೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಅವರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸೇರ್ಪಡೆ ಸಂಬಂಧ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕ್ಷೇತ್ರಕ್ಕೆ ಹೋಗಿ ಬಂದಿದ್ದು, ಅಲ್ಲಿನ ಜನರ ಜೊತೆ ಸಂಪರ್ಕದಲ್ಲಿದ್ದೇನೆ. ನಮ್ಮ ಕುಟುಂಬದ ಬೇರೆ ಸದಸ್ಯರು ರಾಜಕೀಯ ಪ್ರವೇಶದ ಬಗ್ಗೆ ಇನ್ನೂ ಯಾವುದೇ ಚಿಂತನೆ ನಡೆಸಿಲ್ಲ ಎಂದು ಅವರು ಸ್ಪಷ್ಟಣೆ ನೀಡಿದರು.

ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಹಾಗೂ ಅಭಿವೃದ್ಧಿ ಕಾರ್ಯಗಳ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದು, ಅನುದಾನ ನೀಡುವ ಭರವಸೆ ನೀಡಿದ್ದಾರೆ. ಕ್ಷೇತ್ರದ ಒಳಿತಿಗೆ ಶ್ರಮಿಸುವುದು ನನ್ನ ಆದ್ಯತೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News