ಸಂಕಷ್ಟದಲ್ಲಿ ಡಿಕೆಶಿ: ಈ.ಡಿ. ಸಮನ್ಸ್‌ಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2019-08-29 16:10 GMT

ಬೆಂಗಳೂರು, ಆ.29: ಹೊಸದಿಲ್ಲಿಯ ಮನೆಗಳಲ್ಲಿ ದೊರೆತ 8.60 ಕೋಟಿಯಷ್ಟು ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈ.ಡಿ.) ನೀಡಿರುವ ಸಮನ್ಸ್ ರದ್ದುಗೊಳಿಸಲು ಕೋರಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೇರಿ ಒಟ್ಟು ಐವರು ಆರೋಪಿಗಳ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. 

ಇದರಿಂದಾಗಿ ಪ್ರಕರಣದ ವಿಚಾರಣೆಗೆ ಆರೋಪಿಗಳು ಹಾಜರಾಗುವುದು ಅನಿವಾರ್ಯವಾಗಿದೆ. ಈ ಕುರಿತು ಕಾಯ್ದಿರಿಸಲಾಗಿದ್ದ ಆದೇಶವನ್ನು ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ನ್ಯಾಯಪೀಠ ಗುರುವಾರ ಪ್ರಕಟಿಸಿದೆ.

2017ರ ಆ.2ರಂದು ಆದಾಯ ತೆರಿಗೆ(ಐಟಿ) ಅಧಿಕಾರಿಗಳು ಡಿ.ಕೆ.ಶಿವಕುಮಾರ್‌ಗೆ ಸೇರಿದ ಬೆಂಗಳೂರು ಮತ್ತು ಹೊಸದಿಲ್ಲಿಯ ಮನೆಗಳ ಮೇಲೆ ದಾಳಿ ಮಾಡಿ 8,59,69,100 ಮೊತ್ತವನ್ನು ಜಪ್ತಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣ, ಸುನಿಲ್‌ಕುಮಾರ್ ಶರ್ಮ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ಆದಾಯ ತೆರಿಗೆ ಕಾಯ್ದೆ-1961ರ ಕಲಂ 277 ಮತ್ತು 278 ಹಾಗೂ ಐಪಿಸಿ ಕಲಂ 120 ಬಿ, 193 ಹಾಗೂ 199 ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಈ.ಡಿ. ಜಾರಿಗೊಳಿಸಿದ್ದ ಸಮನ್ಸ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಶಿವಕುಮಾರ್ ಪರವಾಗಿ ವಾದ ಮಂಡಿಸಿದ್ದರು. ಈ.ಡಿ. ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದ್ದರು.

ಸುಪ್ರೀಂಕೋರ್ಟ್‌ಗೆ ಮೇಲ್ಮನವಿ: ಆದೇಶ ಪ್ರಶ್ನಿಸಿ ಡಿಕೆಶಿ ಹಾಗೂ ಪ್ರಕರಣದ ಉಳಿದ ಆರೋಪಿಗಳು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು 90 ದಿನಗಳ ಕಾಲಾವಕಾಶ ಇದೆ. ಅರ್ಜಿದಾರರ ಮನವಿಗೆ ಹೈಕೋರ್ಟ್ ತಡೆ ನೀಡದೇ ಇರುವುದರಿಂದ ಈ.ಡಿ. ಯಾವ ಕ್ಷಣದಲ್ಲಾದರೂ ಆರೋಪಿಗಳ ವಿರುದ್ಧ ಕಾರ್ಯ ಪ್ರವೃತ್ತವಾಗಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News