ಡಿಕೆಶಿ ಬಂಧನ ಖಂಡಿಸಿ ರಸ್ತೆ ತಡೆ: ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಆಕ್ರೋಶ

Update: 2019-09-09 18:24 GMT

ಬೆಂಗಳೂರು, ಸೆ.9: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಉದ್ದೇಶಪೂರ್ವಕವಾಗಿಯೇ ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಇದರಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಕೈವಾಡ ಇದೆ ಎಂದು ಆರೋಪಿಸಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದರು.

ಸೋಮವಾರ ರಾಜಾಜಿನಗರದ ಬಾಷ್ಯಂ ವೃತ್ತದ ಶ್ರೀರಾಮ ಮಂದಿರ ಸಮೀಪ ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮಾಜಿ ಮೇಯರ್ ಜಿ.ಪದ್ಮಾವತಿ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನ ಅಂಗ ಸಂಸ್ಥೆಗಳಾದ ಈಡಿ, ಐಟಿಯನ್ನು ತನ್ನ ಸ್ವಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ. ಈ ಉದ್ದೇಶವೇ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಲು ಪ್ರಮುಖ ಕಾರಣ ಎಂದು ದೂರಿದರು.

ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಪ್ರಬಲವಾದ ನಾಯಕರಾಗಿದ್ದು, ಪಕ್ಷ ನೀಡುವ ಯಾವುದೇ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಅಲ್ಲದೇ, ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ನೆಚ್ಚಿನ ನಾಯಕರು ಕೂಡ ಆಗಿದ್ದಾರೆ. ಇದನ್ನು ಸಹಿಸದ ಕೇಂದ್ರ ಬಿಜೆಪಿ ತನ್ನ ಸ್ವಾಯತ್ತ ಸಂಸ್ಥೆಗಳ ಮೂಲಕ ಅವರನ್ನು ಮಟ್ಟ ಹಾಕುವ ಕೆಲಸಕ್ಕೆ ಮುಂದಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News