ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಯಡಿಯೂರಪ್ಪ

Update: 2019-09-17 13:59 GMT

ಕಲಬುರಗಿ, ಸೆ.17: ಹೈ-ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಹೊಸದಾಗಿ ನಾಮಕರಣ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ತೆರೆಯಲಾಗುವುದು ಎಂದು ತಿಳಿಸಿದರು. 

ಮಂಗಳವಾರ ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೈ-ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕವೆಂದು ಹೆಸರಿಡುವುದರಿಂದ ಏನೂ ಸಾಧನೆಯಾಗುವುದಿಲ್ಲವೆಂದು ಗೊತ್ತಿದೆ. ಹೀಗಾಗಿ ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯದ ಮೂಲಕ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳ ಜನ ಅಪೇಕ್ಷಿಸುವ ರೀತಿಯಲ್ಲಿಯೇ ಇಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಬೆಂಗಳೂರಿನಲ್ಲಿರುವ ಹೈದರಾಬಾದ್-ಕರ್ನಾಟಕ ವಿಶೇಷ ಕೋಶದ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುವುದು ಹಾಗೂ ಸಂವಿಧಾನದ 371ಜೆ ಕಲಂನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಅವರು ಹೇಳಿದರು.

ಹೈ-ಕರ್ನಾಟಕದ ಇತಿಹಾಸವನ್ನು ಪಠ್ಯ ಪುಸ್ತಕದಲ್ಲಿ ಸೇರಿಸಲು ಕ್ರಮ ಕೈಗೊಳ್ಳುವ ಜೊತೆಗೆ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಹೈದರಾಬಾದ್ ಕರ್ನಾಟಕ ಪೀಠ ಸ್ಥಾಪನೆ ಮಾಡಲಾಗುವುದು. ಈ ವರ್ಷ ಅತಿವೃಷ್ಟಿಯಿಂದ ಹಣಕಾಸಿಗೆ ತೊಂದರೆಯಾಗಿರಬಹುದು. ಆದರೆ, ಮುಂದಿನ ವರ್ಷದಿಂದ ಆಯವ್ಯಯದಲ್ಲಿ ಈ ಭಾಗಕ್ಕೆ ಹೆಚ್ಚಿನ ಅನುಧಾನ ನೀಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಾನೂನು ಸಚಿವ ಮಾಧುಸ್ವಾಮಿ, ಶಾಸಕರಾದ ರಾಜುಗೌಡ, ರವಿಕುಮಾರ್, ಬಿ.ಜಿ.ಪಾಟೀಲ, ರಾಜಕುಮಾರ್ ಪಾಟೀಲ ತೇಲ್ಕೂರ್. ದತ್ತಾತ್ರೇಯ ಪಾಟೀಲ ರೇವೂರ, ಸುಭಾಷ ಗುತ್ತೇದಾರ, ಬಸವರಾಜ ಮತತ್ತಿಮೂಡ, ಬಾಬುರಾವ ಚಿಂಚಿನಸೂರ ಮತ್ತಿತರರಿದ್ದರು.

ಬೆಳಗಾವಿಯಲ್ಲಿ ಅಧಿವೇಶನ ಇಲ್ಲ

ಪ್ರಸಕ್ತ ವರ್ಷದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಲು ಸಾಧ್ಯವಿಲ್ಲ. ಪ್ರವಾಹದ ಹಿನ್ನೆಲೆಯಲ್ಲಿ ಅಧಿವೇಶನವನ್ನು ನಡೆಸಲು ಆಗುವುದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಈ ವರ್ಷ ರಾಜಧಾನಿ ಬೆಂಗಳೂರಿನಲ್ಲೇ ಚಳಿಗಾಲದ ಅಧಿವೇಶನವನ್ನು ನಡೆಸಲಾಗುವುದು.

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News