ಅಕ್ರಮ ಡಿನೋಟಿಫಿಕೇಶನ್ ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಿದ್ದರಾಮಯ್ಯ, ಎಚ್‌ಡಿಕೆ

Update: 2019-09-20 15:45 GMT

ಬೆಂಗಳೂರು, ಸೆ.20: ಹಲಗೆವಡೇರಹಳ್ಳಿಯ ಡಿನೋಟಿಫಿಕೇಶನ್ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಜಮೀನಿನ ಅಕ್ರಮ ಡಿನೋಟಿಫಿಕೇಶನ್ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ಎಚ್‌ಡಿಕೆ ಸಲ್ಲಿಸಿದ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. 2007ರಲ್ಲಿ ಎಚ್‌ಡಿಕೆ ಮೊದಲ ಬಾರಿ ಸಿಎಂ ಆಗಿದ್ದ ವೇಳೆ ನಡೆದಿದೆ ಎನ್ನಲಾದ ಡಿನೋಟಿಫಿಕೇಶನ್ ಸಂಬಂಧ ಅ.4ರಂದ ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್‌ಡಿಕೆ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹಲಗೆವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2012ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2019ರ ಆರಂಭದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ದೂರುದಾರ ಮಹದೇವಸ್ವಾಮಿ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆದೇಶಿಸಿ, ವಿಚಾರಣೆಗೆ ಹಾಜರಾಗಲು ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು.

ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಂ ಸಿದ್ದರಾಮಯ್ಯ   

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಜಮೀನಿನ ಅಕ್ರಮ ಡಿನೋಟಿಫಿಕೇಶನ್ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ಸೆ.20ರಂದು ಅರ್ಜಿ ವಿಚಾರಣೆಗೆ ಬರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಸೆ.23ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತ್ತು. ಹೀಗಾಗಿ, ಸಿದ್ದರಾಮಯ್ಯ ಅವರು ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮೈಸೂರಿನ ಎನ್.ನಾಗರಾಜು ಎಂಬುವವರು ಸಲ್ಲಿಸಿರುವ ಖಾಸಗಿ ದೂರು ಇದಾಗಿದೆ. 1997ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೈಸೂರಿನ ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಡಿನೋಟಿಫಿಕೇಶನ್ ಆಗಿದ್ದ 10 ಗುಂಟೆ ಜಮೀನು ಖರೀದಿಸಿದ್ದರು. ನಂತರ 2003ರಲ್ಲಿ ಮನೆ ನಿರ್ಮಾಣ ಮಾಡಿ ಮಾರಾಟ ಮಾಡಿದ್ದರು. ಈ ಪ್ರಕರಣವನ್ನು ಮೈಸೂರಿನ ಲಕ್ಷ್ಮಿಪುರಂ ಪೊಲೀಸರು ಬಿ ರಿಪೋರ್ಟ್ ಹಾಕಿದ್ದರು. ಆದರೆ, ಇದೀಗ ಜನಪ್ರತಿನಿಧಿಗಳ ಕೋರ್ಟ್ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕಾರ ಮಾಡಿ, ವಿಚಾರಣೆಗೆ ಅಸ್ತು ಎಂದಿತ್ತು. ಈ ಮೂಲಕ ಸಿದ್ದರಾಮಯ್ಯಗೆ ಮತ್ತೆ ಭೂ ಸಂಕಷ್ಟ ಉಂಟಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News