ಉಪಚುನಾವಣೆ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು, ಅ.21: ರಾಜ್ಯದಲ್ಲಿ ನಡೆಯಲಿರುವ 15 ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ, ಜನಪರ ರಾಜಕಾರಣಕ್ಕಾಗಿ ಮತ್ತು ಕರ್ನಾಟಕ ಹಾಗೂ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸ್ಥಾಪಿಸಿದ್ದು ಇದೇ ಮೊದಲ ಬಾರಿಗೆ ಸ್ಪರ್ಧಿಸಲಿದ್ದೇವೆ. 15 ಕ್ಷೇತ್ರಗಳಲ್ಲಿ 7 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಉಳಿದ 8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಗಿರೀಶ್ ಪಿ.ಕೆ.ಆರ್.ಪುರದಿಂದ ಜಗದೀಶ್, ಹಿರೇಕೆರೂರು ಕ್ಷೇತ್ರದಿಂದ ಜಯದೇವ ಕೆರೂಡಿ, ವಿಜಯನಗರ ಕ್ಷೇತ್ರದಿಂದ ಪ.ಯ.ಗಣೇಶ್, ಕಾಗವಾಡದಿಂದ ಪ್ರಶಾಂತ್ ಭಜಂತ್ರಿ, ಕೆ.ಆರ್.ಪೇಟೆ ಕ್ಷೇತ್ರದಿಂದ ಕೆ.ಎನ್. ಶಂಕರೇಗೌಡ, ಹುಣಸೂರು ಕ್ಷೇತ್ರದಿಂದ ತಿಮ್ಮಾ ಬೋವಿ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.
ಶಾಸಕರ ಪಕ್ಷಾಂತರ ನಡೆ, ಭ್ರಷ್ಟಾಚಾರ ಮತ್ತು ರಾಜ್ಯದ ಹಿತರಕ್ಷಣೆಗಳನ್ನು ಮುಂದಿಟ್ಟು ಚುನಾವಣೆಯನ್ನು ಎದುರಿಸಲಾಗುವುದು. ರಾಜ್ಯ ಚುನಾವಣಾ ಆಯೋಗವು ಘೋಷಿಸಿರುವ 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವು ಸ್ಫರ್ಧಿಸಲಿದೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ನಡೆದಿದೆ ಎಂದರು.