'ಚುನಾವಣೆ ಮೇಲೆ ದುಷ್ಪರಿಣಾಮ ಬೀರದ ಟ್ಯಾಬ್ಲೊ ತಯಾರಿಸಿ'

Update: 2019-10-25 17:33 GMT

ಮಂಗಳೂರು, ಅ.25: ಕನ್ನಡ ರಾಜ್ಯೋತ್ಸವ ದಿನದಂದು ನಡೆಯುವ ಮೆರವಣಿಗೆಯಲ್ಲಿ ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ರೀತಿಯ ಟ್ಯಾಬ್ಲೋ ತಯಾರಿಸದಂತೆ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಸೂಚಿಸಿದ್ದಾರೆ.

ನಗರದ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆ ಸಾರ್ವತ್ರಿಕ ಚುನವಣೆ ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಚುನಾವಣೆಗೆ ಸಂಬಂಧಪಟ್ಟಂತೆ ಪ್ರಚೋದನೆಗೆ ಒಳಪಡುವಂತಹ ಟ್ಯಾಬ್ಲೋ ಇರಬಾರದು. ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಸಂಭ್ರಮದಿಂದ ಆಚರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೆರವಣಿಗೆಯಲ್ಲಿ ಭಾಗವಹಿಸುವಂತಹ ಟ್ಯಾಬ್ಲೋಗಳಿಗೆ ಹಾಗೂ ಪುರಭವನದಲ್ಲಿ ನಡೆಯವಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಹ ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಬೇಕು. 2019ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜೋತ್ಸವದ ಸಂಭ್ರಮಾಚರಣೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

‘ಟ್ಯಾಬ್ಲೋದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ’

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯುವಂತಹ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಟ್ಯಾಬ್ಲೋಗಳ ಜವಾಬ್ದಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿಭಾಯಿಸಬೇಕು. ಕಾರ್ಯಕ್ರಮಗಳಲ್ಲಿ ಹಾಗೂ ಟ್ಯಾಬ್ಲೋಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಮಹತ್ವ ನೀಡಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ (ಹಾಡು, ನೃತ್ಯ, ನಾಟಕ ಇತ್ಯಾದಿ) ಕನ್ನಡ ಭಾಷೆಯ ಹಾಡುಗಳನ್ನೇ ಬಳಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News