ಯಡಿಯೂರಪ್ಪ, ಅಮಿತ್ ಶಾ ತಕ್ಷಣವೇ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ನ.2: ರಾಜ್ಯದಲ್ಲಿ ಮೈತ್ರಿ ಸರಕಾರ ಉರುಳಿಸುವಲ್ಲಿ, 17 ಶಾಸಕರು ರಾಜೀನಾಮೆ ನೀಡಿರುವುದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇರ ಭಾಗಿಯಾಗಿದ್ದಾರೆ ಎಂಬುದನ್ನು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಾಸಕರ ರಾಜೀನಾಮೆಗೂ ಬಿಜೆಪಿಗೂ ಸಂಬಂಧ ಇಲ್ಲ ಎನ್ನುತ್ತಿದ್ದ ಯಡಿಯೂರಪ್ಪ, ಈಗ ಆಪರೇಷನ್ ಕಮಲ ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವಿಡಿಯೋದಲ್ಲಿ ಹೇಳಿದ್ದಾರೆ. ಇಂತಹ ಗೃಹ ಸಚಿವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇದೆಯೇ ಎಂದರು.
ನಮ್ಮ ಪಕ್ಷದ ಶಾಸಕರಿಗೆ ಆಮಿಷಗಳನ್ನು ಒಡ್ಡಿ ಮುಂಬೈನ ಹೊಟೇಲ್‌ನಲ್ಲಿಟ್ಟು ಮೈತ್ರಿ ಸರಕಾರದ ಪತನಕ್ಕೆ ನೇರ ಕಾರಣವಾಗಿರುವ ಅಮಿತ್ ಶಾ, ಆಪರೇಷನ್ ಕಮಲ ಎಂಬ ಅಸಂವಿಧಾನಿಕ ಕಾರ್ಯಾಚರಣೆಯ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಆಪರೇಷನ್ ಕಮಲದ ಹೆಸರಿನಲ್ಲಿ ಸಂವಿಧಾನದ ಕಗ್ಗೊಲೆಯಾಗುತ್ತಿದೆ. ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರು ನೇರವಾಗಿ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪುರಾವೆ ಸಿಕ್ಕಿದೆ. ಆದುದರಿಂದ, ಇದನ್ನು ಇಲ್ಲಿಗೆ ಕೈಬಿಡುವ ಪ್ರಶ್ನೆಯೇ ಇಲ್ಲ, ಇದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದು ನ್ಯಾಯ ಕೇಳುತ್ತೇವೆ ಎಂದು ಅವರು ತಿಳಿಸಿದರು.
ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರನ್ನು ಭೇಟಿ ಮಾಡಿ, ಯಡಿಯೂರಪ್ಪ ರಾಜೀನಾಮೆ ಪಡೆಯುವಂತೆ ಮನವಿ ಪತ್ರ ನೀಡಲಿದ್ದೇವೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ರಾಷ್ಟ್ರಪತಿಯನ್ನು ಭೇಟಿ ಮಾಡಿ ಅಮಿತ್ ಶಾ ಹಾಗೂ ಕೇಂದ್ರ ಸರಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ನಮ್ಮ ವಕೀಲರ ಜೊತೆ ಚರ್ಚೆ ಮಾಡಿದ್ದೇವೆ. ಅನರ್ಹ ಶಾಸಕರ ಪ್ರಕರಣದ ತೀರ್ಪು ಬರುವ ಮುನ್ನ, ಈ ಯಡಿಯೂರಪ್ಪ ಮಾತನಾಡಿರುವ ಆಡಿಯೋ ಕುರಿತು ವಿಚಾರಣೆ ಕೈಗೆತ್ತಿಕೊಳ್ಳುವಂತೆ ಇಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಯಡಿಯೂರಪ್ಪ ಆಪರೇಷನ್ ಕಮಲದ ಜನಕ ಎಂದು ನಾವು ಹೇಳಿದ್ದೆವು. ಆದರೆ, ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ ಎಂದು ಬಿಜೆಪಿಯವರು ಹೇಳಿದ್ದರು. ಇದೀಗ, ಅಮಿತ್ ಶಾ ನಿರ್ದೇಶನದ ಮೇಲೆ ಆಪರೇಷನ್ ಕಮಲ ಮಾಡಿದ್ದೇವೆ. ಅನರ್ಹ ಶಾಸಕರ ತ್ಯಾಗದಿಂದ ಈ ಸರಕಾರ ಬಂದಿದೆ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಅನರ್ಹ ಶಾಸಕರನ್ನು ಎರಡೂವರೆ ತಿಂಗಳು ಅಮಿತ್ ಶಾ ನೋಡಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅಮಿತ್ ಶಾ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ನಮ್ಮ ಆರೋಪ ಈಗ ಸತ್ಯವಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ನ.4ರಂದು ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕುವ ವಿಚಾರದ ಕುರಿತು ಶೃಂಗ ಸಭೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಈ ಒಪ್ಪಂದಕ್ಕೆ ಸಹಿ ಮಾಡುವ ಸಾಧ್ಯತೆಯಿದೆ. ಆರ್‌ಸಿಇಪಿ ಜಾರಿಯಿಂದ ದೇಶದ ರೈತರ ಸ್ಥಿತಿ ಅಧೋಗತಿಗೆ ತಲುಪಲಿದೆ ಎಂದು ಅವರು ಹೇಳಿದರು.
ಆರ್‌ಸಿಇಪಿ ಮತ್ತು ಮುಕ್ತ ವ್ಯಾಪಾರ ನೀತಿಯಿಂದಾಗಿ ದೇಶದ ಹೈನೋದ್ಯಮ ಮತ್ತು ದೇಶಿ ವಸ್ತುಗಳ ತಯಾರಿಕರ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತದೆ. ಆರ್‌ಸಿಇಪಿ ಹಾಗೂ ಮುಕ್ತ ವ್ಯಾಪಾರ ನೀತಿಗೆ ಪ್ರಧಾನಿ ಸಹಿ ಹಾಕಿದರೆ, ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ವಿಧಾನಪರಿಷತ್ತಿನ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.