ಬೆಂಗಳೂರು: ಯಡಿಯೂರಪ್ಪ ಸರಕಾರ ವಜಾಗೊಳಿಸಲು ಆಗ್ರಹಿಸಿ ಕಾಂಗ್ರೆಸ್ ಧರಣಿ
ಬೆಂಗಳೂರು, ನ.5: ರಾಜ್ಯದಲ್ಲಿನ ಬಿಜೆಪಿ ಸರಕಾರ ವಜಾಗೊಳಿಸುವ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.
ಮಂಗಳವಾರ ನಗರದ ಎಂಜಿ ರಸ್ತೆಯ ಟ್ರಿನಿಟಿ ವೃತ್ತದ ಬಳಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ತಪ್ಪಿತಸ್ಥ ಸರಕಾರದ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮಾಧ್ಯಮಗಳ ಮುಂದೆ ಅನರ್ಹ ಶಾಸಕರಿಗೂ ಹಾಗೂ ತಮಗೂ ಸಂಬಂಧವೇ ಇಲ್ಲ ಎಂದು ವಾದಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಮತ್ತು ಬಿಜೆಪಿಯ ಮುಖಂಡರ ಭಂಡತನ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಯಲಾಗಿದೆ. 17 ಶಾಸಕರನ್ನು ರಾಜೀನಾಮೆ ಕೊಡಿಸಿ ಅನರ್ಹಗೊಳಿಸಿದರು. ಅದರಿಂದ ಹಿಂದಿನ ಸಮ್ಮಿಶ್ರ ಸರಕಾರವನ್ನು ಕೆಡವಿ ರಾಜ್ಯದಲ್ಲಿ ಬಿಜೆಪಿ ಸರಕಾರ ರಚಿಸಲು ಅನೈತಿಕ ಮಾರ್ಗ ಅನುಸರಿಸಿತು. ಇದರ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾತ್ರವಿದೆ ಎಂದು ಮುಖ್ಯಮಂತ್ರಿ ಯಡಿಯುರಪ್ಪನವರೇ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ, ಎನ್.ಎ. ಹಾರಿಸ್, ರಿಝ್ವನ್ ಅರ್ಶದ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.