ಅನರ್ಹ ಶಾಸಕರ ಗೆಲುವಿಗೆ ತನು, ಮನ, ಧನ ಸಹಾಯ: ಯಡಿಯೂರಪ್ಪ
ಬೆಂಗಳೂರು, ನ.14: ಈ ಹಿಂದಿನ ಸಭಾಧ್ಯಕ್ಷ ರಮೇಶ್ ಕುಮಾರ್ ಅನರ್ಹಗೊಳಿಸಿದ್ದ ರಾಜ್ಯದ 17 ಮಂದಿ ಜೆಡಿಎಸ್ -ಕಾಂಗ್ರೆಸ್ ಶಾಸಕರ ಪೈಕಿ 16 ಮಂದಿ ಗುರುವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು.
ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ, ವಿಜಯನಗರ ಕ್ಷೇತ್ರದ ಆನಂದ್ ಸಿಂಗ್, ಕೆ.ಆರ್.ಪೇಟೆ ಕ್ಷೇತ್ರದ ನಾರಾಯಣಗೌಡ, ಹೊಸಕೋಟೆ ಕ್ಷೇತ್ರದ ಎಂಟಿಬಿ ನಾಗರಾಜ್, ಅಥಣಿ ಕ್ಷೇತ್ರದ ಮಹೇಶ್ ಕುಮಟಳ್ಳಿ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಗೋಪಾಲಯ್ಯ, ಯಲ್ಲಾಪುರ ಕ್ಷೇತ್ರದ ಶಿವರಾಮ್ ಹೆಬ್ಬಾರ್, ಹಿರೆಕೇರೂರು ಕ್ಷೇತ್ರದ ಬಿ.ಸಿ.ಪಾಟೀಲ್, ಯಶವಂತಪುರದ ಎಸ್.ಟಿ.ಸೋಮಶೇಖರ್, ಚಿಕ್ಕಬಳ್ಳಾಪುರದ ಸುಧಾಕರ್, ಕೆ.ಆರ್.ಪುರ ಕ್ಷೇತ್ರದ ಬೈರತಿ ಬಸವರಾಜು, ಹುಣಸೂರು ಕ್ಷೇತ್ರದ ಎಚ್.ವಿಶ್ವನಾಥ್, ಕಾಗವಾಡ ಕ್ಷೇತ್ರದ ಶ್ರೀಮಂತ ಪಾಟೀಲ್, ರಾಜರಾಜೇಶ್ವರಿ ನಗರದ ಮುನಿರತ್ನ, ಮಸ್ಕಿ ಕ್ಷೇತ್ರದ ಪ್ರತಾಪ್ ಗೌಡ ಪಾಟೀಲ್ ಹಾಗೂ ರಾಣಿಬೆನ್ನೂರು ಕ್ಷೇತ್ರದ ಅನರ್ಹ ಶಾಸಕರಾದ ಶಂಕರ್ ಬಿಜೆಪಿಗೆ ಸೇರ್ಪಡೆಗೊಂಡರು.
ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ. ಇವತ್ತು ಬಿಜೆಪಿ ಪಾಲಿಗೆ ಐತಿಹಾಸಿಕ ದಿನವಾಗಿದೆ. ಅನರ್ಹ ಶಾಸಕರು ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟು ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ. ಬಿಜೆಪಿಗಾಗಿ ತಮ್ಮ ಸಚಿವ ಸ್ಥಾನವನ್ನು ತ್ಯಾಗ ಮಾಡಿ ಅನರ್ಹಗೊಂಡ ಶಾಸಕರನ್ನು ಗೆಲ್ಲಿಸುವುದಕ್ಕಾಗಿ ತನು, ಮನ, ಧನವನ್ನು ವಿನಿಯೋಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.