ಲಂಚ ಸ್ವೀಕಾರ: ಆರೋಪಿಗೆ ಸಾದಾ ಸಜೆ

Update: 2019-11-27 17:10 GMT

ಮಂಗಳೂರು, ನ. 27: ಬಂಟ್ವಾಳ ತಾಲೂಕಿನ ವೀರಕಂಬ ಫಾರೆಸ್ಟ್ ಗಾರ್ಡ್ ಆಗಿದ್ದ ಮನೋಜ್ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ ಲಂಚ ಸ್ವೀಕಾರ ಆರೋಪ ಸಾಬೀತಾಗಿದ್ದು, ಆತನಿಗೆ ಮಂಗಳೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಬುಧವಾರ ಶಿಕ್ಷೆ ವಿಧಿಸಿದೆ.

2012ರ ಜುಲೈ 23ರಂದು ಮರದ ಕಟ್ಟಿಗೆ ಸಾಗಿಸುತ್ತಿದ್ದ ಟೆಂಪೋವನ್ನು ಪ್ರಕರಣ ದಾಖಲಿಸದೆ ಬಿಡುಗಡೆ ಮಾಡಲು ವಾಹನದ ಮಾಲಕ ಬಂಟ್ವಾಳ ತಾಲೂಕಿನ ಬಾರೆಬೆಟ್ಟು ನಿವಾಸಿ ಮುಹಮ್ಮದ್ ಮುಸ್ತಫ ಅವರಿಂದ 5,000 ರೂ. ಲಂಚದ ಹಣಕ್ಕೆ ಆಗಿನ ಫಾರೆಸ್ಟ್ ಗಾರ್ಡ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು.

ಈ ಬಗ್ಗೆ ಮುಹಮ್ಮದ್ ಮುಸ್ತಫ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಲೋಕಾಯುಕ್ತ ಪೊಲೀಸರು ಆರೋಪಿ ಯನ್ನು ತಮ್ಮ ಬಲೆಗೆ ಹಾಕಲು ತಂತ್ರ ಹೆಣೆದಿದ್ದರು. ಆರೋಪಿ ಮನೋಜ್ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕ ದಿಲೀಪ್ ಕುಮಾರ್ ಮತ್ತು ಸಿಬ್ಬಂದಿ ದಾಳಿ ಮಾಡಿ ಬಂಧಿಸಿದ್ದರು. ಆಗ ವೀರಕಂಬದಲ್ಲಿ ಫಾರೆಸ್ಟ್ ಗಾರ್ಡ್ ಆಗಿದ್ದ ಮನೋಜ್ ಪ್ರಸ್ತುತ ಬಂಟ್ವಾಳ ತಾಲೂಕಿನ ವಗ್ಗ ದಲ್ಲಿ ಫಾರೆಸ್ಟ್ ಗಾರ್ಡ್ ಆಗಿದ್ದಾರೆ.

 ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಮುರಳೀಧರ ಪೈ ಅವರು ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 7ರ ಅಡಿಯಲ್ಲಿ ಎಸಗಿದ ಅಪರಾಧಕ್ಕೆ 1 ವರ್ಷ ಸಾದಾ ಸಜೆ ಮತ್ತು 10,000 ರೂ. ದಂಡ ಹಾಗೂ ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 1 ವರ್ಷ ಸಾದಾ ಸಜೆ ಮತ್ತು 10,000 ರೂ.ದಂಡ ವಿಧಿಸಲಾಗಿದೆ.
 ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಆಗಿನ ಲೋಕಾಯುಕ್ತ ಇನ್‌ಸ್ಪೆಕ್ಟರ್ ದಿಲೀಪ್‌ಕುಮಾರ್ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ವಕೀಲ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News