ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿ : ಯು.ಟಿ.ಖಾದರ್

Update: 2019-12-16 17:19 GMT

ಮಂಗಳೂರು, ಡಿ.16: ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ರವಿವಾರ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಬಾಬರಿ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮತೀಯತೆಗೆ ಪ್ರೋತ್ಸಾಹ ನೀಡಿರುವುದು ಖಂಡನೀಯ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ಈ ಹಿಂದೆ ಉಳ್ಳಾಲದಲ್ಲಿ ಪಿಎಫ್‌ಐ ಸಂಘಟನೆಯವರು ಬಾಬರಿ ಮಸೀದಿ ದ್ವಂಸಕ್ಕೆ ಸಂಬಂಧಿಸಿ ಕಾರ್ಯಕ್ರಮ ನಡೆಸಲು ಮುಂದಾದಾಗ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಹಾಗೇ ಕಲ್ಲಡ್ಕ ಪ್ರಕರಣದಲ್ಲೂ ಕೂಡ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಪೊಲೀಸ್ ಇಲಾಖೆಯು ಪಕ್ಷಪಾತಿಯಲ್ಲ ಎಂಬುದನ್ನು ಸಾಬೀತುಪಡಿಸಬೇಕು ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

ಕಲ್ಲಡ್ಕದಲ್ಲಿ ಇಂಥದ್ದೊಂದು ಕಾರ್ಯಕ್ರಮವು ಪೊಲೀಸ್ ಅಧಿಕಾರಿಗಳ ಸಮ್ಮುಖ ನಡೆಯಬಾರದಿತ್ತು. ನಡೆದ ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು ಎಂದಿರುವ ಖಾದರ್, ಮಾಜಿ ಪೊಲೀಸ್ ಅಧಿಕಾರಿ ಕಿರಣ್ ಬೇಡಿಯ ಬಗ್ಗೆ ಸಮಾಜದಲ್ಲಿ ಒಳ್ಳೆಯ ಗೌರವವಿತ್ತು. ಆದರೆ, ಅವರು ಕಲ್ಲಡ್ಕ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಮರ್ಥಿಸಿ ಮಾತನಾಡಿದ್ದನ್ನು ಅವಲೋಕಿಸುವಾಗ ಆಕೆಯ ಮೇಲಿದ್ದ ಗೌರವ ದೂರವಾಗಿದೆ. ಸಾಂವಿಧಾನಿಕ ಸ್ಥಾನದಲ್ಲಿರುವ ಕಿರಣ್ ಬೇಡಿ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಲ್ಲದೆ, ಅದನ್ನು ಸಮರ್ಥಿಸಿದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಹಾಗಾಗಿ ಅವರ ವಿರುದ್ಧ ರಾಷ್ಟ್ರಪತಿಗೆ ಕಾಂಗ್ರೆಸ್ ವತಿಯಿಂದ ದೂರು ನೀಡಲಾಗುವುದು ಎಂದು ಖಾದರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News