ಸಿಎಎ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ : ಮೂವರು ಬಲಿ

Update: 2019-12-20 04:15 GMT

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ಇಡೀ ದೇಶ ಅಕ್ಷರಶಃ ಬೀದಿಗಿಳಿದಿದ್ದು, ದೇಶದ ವಿವಿಧೆಡೆಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದಾಗ ಮಂಗಳೂರಿನಲ್ಲಿ ಇಬ್ಬರು ಹಾಗೂ ಲಕ್ನೋದಲ್ಲಿ ಒಬ್ಬರು ಬಲಿಯಾಗಿದ್ದಾರೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಮಂಗಳೂರಿನಲ್ಲಿ ಮೃತಪಟ್ಟಿದ್ದರೆ, ಲಕ್ನೋದ ಹುಸೈನಾಬಾದ್ ನಿವಾಸಿ ಮುಹಮ್ಮದ್ ವಕೀಲ್ ಜೀವ ಕಳೆದುಕೊಂಡಿದ್ದಾರೆ. ಆದರೆ ವಕೀಲ್ ಸಾವಿಗೂ ಪೊಲೀಸರಿಗೂ ಯಾವುದೇ ಸಂಬಂಧ ಇಲ್ಲ ಎಂದು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ. ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಗುರುವಾರ ದೇಶದ 24 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 56 ನಗರಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದು, ಮಂಗಳೂರು, ಮೈಸೂರು, ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ನಗರಗಳು, ದೆಹಲಿ, ಅಸ್ಸಾಂನ ಎಲ್ಲ ಜಿಲ್ಲೆಗಳಲ್ಲಿ ನಿಷೇಧಾಜ್ಞೆ, ಹಲವೆಡೆ ಕರ್ಫ್ಯೂ ವಿಧಿಸಲಾಗಿದೆ. ಹಲವೆಡೆ ಮೊಬೈಲ್ ಹಾಗೂ ಇಂಟರ್‌ನೆಟ್ ಸೇವೆಗಳನ್ನು ರದ್ದುಪಡಿಸಲಾಗಿದೆ.

ಉತ್ತರ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಬಿಹಾರ ಹಾಗೂ ಗುಜರಾತ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಮಂಗಳೂರಿನಲ್ಲಿ 20 ಮಂದಿ ಪೊಲೀಸರು ಗಾಯಗೊಂಡಿದ್ದು, ಆತ್ಮರಕ್ಷಣೆ ಕ್ರಮವಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷಾ ಹೇಳಿದ್ದಾರೆ.

ಲಕ್ನೋದಲ್ಲಿ ಎಡಿಜಿಪಿ ಎನ್.ಎನ್.ಸಬತ್ ಹಾಗೂ ಲಕ್ನೋ ಐಜಿ ಎಸ್.ಕೆ.ಭಗತ್ ಸೇರಿದಂತೆ 16 ಮಂದಿ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಇತಿಹಾಸಕಾರ ರಾಮಚಂದ್ರ ಗುಹಾ, ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ, ರಿಝ್ವಾನ್ ಅರ್ಷದ್, ರಂಗಕರ್ಮಿ ಪ್ರಸನ್ನ ಸೇರಿದಂತೆ ವಿವಿಧೆಡೆ ಸಾವಿರಾರು ಮಂದಿ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್, ಪಟಿಯಾಲಾ ಮಾಜಿ ಸಂಸದ ಧರ್ಮವೀರ್ ಗಾಂಧಿ, ರಾಷ್ಟ್ರೀಯ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷ ಹರ್ಷ ಮಂದೇರ್, ಪ್ರಶಾಂತ್ ಭೂಷಣ್, ಸಾಮಾಜಿಕ ಕಾರ್ಯಕರ್ತ ಜಾನ್ ದಯಾಲ್ ಕೂಡಾ ಬಂಧಿತರಲ್ಲಿ ಸೇರಿದ್ದಾರೆ.

ಮುಂಬೈ, ಜೈಪುರ, ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿದ್ದರೂ, ಸಾವಿರಾರು ಮಂದಿ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಜಮ್ಮು ಕಾಶ್ಮೀರ, ಡೆಹ್ರಾಡೂನ್ ಹಾಗೂ ಶಿಮ್ಲಾದಲ್ಲೂ ಶಾಂತಿಯುತ ಪ್ರತಿಭಟನೆ ನಡೆದಿದೆ. ಚಂಡೀಗಢದಲ್ಲಿ ಮುಸ್ಲಿಂ ಸಂಘಟನೆಗಳು, ಸಿಕ್ಖ್ ಹಾಗೂ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News