ಡಿ.29ರಿಂದ ಮಲ್ಪೆ ಬೀಚ್ ಉತ್ಸವ: ಜಿಲ್ಲಾಧಿಕಾರಿ ಜಿ.ಜಗದೀಶ್

Update: 2019-12-27 16:32 GMT

ಉಡುಪಿ, ಡಿ.27: ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ನಗರಸಬೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ, ನಿರ್ಮಿತಿ ಕೇಂದ್ರ, ಪಶುಪಾಲನ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಹಾಗೂ ಸ್ಥಳೀಯ ಭಜನಾ ಮಂಡಳಿಗಳ ಸಹಯೋಗದಲ್ಲಿ ಡಿ.29ರಿಂದ 31ರವರೆಗೆ ಮಲ್ಪೆ ಬೀಚ್‌ನಲ್ಲಿ, ಮಲ್ಪೆ ಬೀಚ್ ಉತ್ಸವ- 2019ನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.

ಉಡುಪಿ ನಗರಸಬೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಶುಕ್ರವಾರ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಡಿ.29ರ ಬೆಳಗ್ಗೆ ಮಲ್ಪೆ ಬೀಚ್ ಉತ್ಸವದ ಉದ್ಘಾಟನೆ ನಡೆಯಲಿದೆ. ಅಂದು ಮಕ್ಕಳಿಗಾಗಿ ಚಿತ್ರಕಲೆ ಸ್ಫರ್ಧೆ, ಪುರುಷರಿಗಾಗಿ ವಾಲಿಬಾಲ್ ಹಾಗೂ ಮಹಿಳೆಯರಿಗಾಗಿ ತ್ರೋಬಾಲ್ ಪಂದ್ಯಾಟ, ಮರಳುಶಿಲ್ಪಸ್ಪರ್ಧೆ, ಗಾಳಿಪಟ ಪ್ರದರ್ಶನ, ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದೆ. ಸ್ಥಳೀಯ ಪ್ರತಿಬೆಗಳಿಗೆ ಹೆಚ್ಚಿನ ಅವಕಾಶ ನೀಡುವ ಉದ್ಧೇಶದಿಂದಾಗಿ ಉಡುಪಿ ಜಿಲ್ಲೆಯ ಹೆಸರಾಂತ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಡಿ.30ರಂದು ಸಂಜೆ ಕರ್ನಾಟಕದ ವಿವಿಧ ಜಿಲ್ಲೆಗಳ ಕಲಾ ತಂಡಗಳಿಂದ ಜನಪದ ಜಾತ್ರೆ ಹಾಗೂ ಪುರುಷರಿಗಾಗಿ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿದ್ದು, ಡಿ.31ರಂದು ಕರಾವಳಿ ಕರ್ನಾಟಕದ ಹೆಸರಾಂತ ಕಲಾವಿದರಿಂದ ಸಂಗೀತ ರಸಮಂಜರಿ ಹಾಗೂ ನೃತ್ಯ ವೈವಿದ್ಯಮಯ ಕಾರ್ಯಕ್ರಮ ಹಾಗೂ ಅಂತರಾಷ್ಟ್ರೀಯ ಮಟ್ಟದ ಚಿತ್ರ ಕಲಾವಿದರಿಂದ ವರ್ಣ ವಸಂತ ಚಿತ್ರ ಪ್ರದರ್ಶನ ಕಾರ್ಯಕ್ರಮ ಮತುತಿ ಕೇರಳದ ಖ್ಯಾತ ಕಲಾವಿದರಿಂದ ನೃತ್ಯ ಪ್ರದರ್ಶನ ನಡೆಯಲಿದ್ದು, ಮಧ್ಯರಾತ್ರಿ 12 ಗಂಟೆಯಿಂದ 12:30ರವರೆಗೆ ಸುಡುಮದ್ದು ಪ್ರದರ್ಶನ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ಬೀಚ್‌ಗಳನ್ನು ಬ್ಲೂಪ್ಲಾಗ್ ಮಾನ್ಯತೆ ಪಡೆಯುವ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಯೋಜನೆ ಇದ್ದು, ಈ ನಿಟ್ಟಿನಲ್ಲಿ ಸರ್ವೇ ಕಾರ್ಯಗಳನ್ನು ನಡೆಸಲಾಗಿದೆ ಎಂದ ಜಿಲ್ಲಾಧಿಕಾರಿ, ಸೋಮೇಶ್ವರ ಬೀಚ್ ಹಾಗೂ ಮರವಂತೆ ಬೀಚ್‌ಗಳ ಅಭಿವೃದ್ದಿಗೆ ತಲಾ 5 ಕೋಟಿ ರೂ. ಮಂಜೂರಾಗಿದೆ ಹಾಗೂ ಜನವರಿಯಲ್ಲಿ ಕಾಪು ಲೈಟ್‌ಹೌಸ್ ಉತ್ಸವ ಆಚರಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರತಿಕಾಗೋಷ್ಟಿಯಲ್ಲಿ ಉಡುಪಿ ನಗರಸಭೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ನಾಯಕ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News