ಎರಡು ಸ್ಥಾನಕ್ಕೆ 200 ಮಂದಿ ಆಕಾಂಕ್ಷಿಗಳು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Update: 2020-06-16 17:34 GMT

ಬೆಂಗಳೂರು, ಜೂ. 16: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇದೇ ತಿಂಗಳ 29ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಿನ ಎರಡು ಸ್ಥಾನಗಳಿಗೆ 200ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಬಹಿರಂಗಪಡಿಸಿದ್ದಾರೆ.

ಮಂಗಳವಾರ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಜು.2ಕ್ಕೆ ನಡೆಸುವ ಸಂಬಂಧ ಹಾಗೂ ಮೇಲ್ಮನೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇಲ್ಮನೆ ಚುನಾವಣಾ ಆಕಾಂಕ್ಷಿಗಳ ಪಟ್ಟಿಯನ್ನು ವರಿಷ್ಟರಿಗೆ ರವಾನಿಸಲಾಗುವುದು ಎಂದರು.

ಹಸ್ತಕ್ಷೇಪವಿಲ್ಲ: ವಿಧಾನ ಪರಿಷತ್ ಚುನಾವಣೆಯಲ್ಲಿ ವಿವಿಧ ಸಮುದಾಯಗಳು ಹಾಗೂ ವಿವಿಧ ಪ್ರದೇಶಗಳಿಂದ 200ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಪಕ್ಷಕ್ಕೆ ಎರಡು ಅಥವಾ ಮೂರು ಸ್ಥಾನಗಳು ಸಿಗುವ ಸಾಧ್ಯತೆಗಳಿವೆ. ಆಕಾಂಕ್ಷಿಗಳ ಹೆಸರನ್ನು ವರಿಷ್ಟರಿಗೆ ಶಿಫಾರಸ್ಸು ಮಾಡಲಾಗುವುದು. ಅವರು ಅಂತಿಮವಾಗಿ ಘೋಷಣೆ ಮಾಡಲಿದ್ದಾರೆ. ಈ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಮಾದರಿಯಲ್ಲೇ ಪಕ್ಷದ ಕಾರ್ಯಕರ್ತರಿಗೆ ನೀಡಬೇಕೆಂಬ ಆಗ್ರಹಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಿವಕುಮಾರ್, ಈ ಬಗ್ಗೆಯೂ ಹೈಕಮಾಂಡ್ ತೀರ್ಮಾನ ಮಾಡಲಿದೆ. ಜೂ.18ಕ್ಕೆ ಮೇಲ್ಮನೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಶೀಘ್ರವೇ ವರಿಷ್ಟರಿ ಅಭ್ಯರ್ಥಿಗಳನ್ನು ಪ್ರಕಟಿಸಲಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News