ಬಡಗಬೆಟ್ಟು ಟ್ರೀ ಪಾರ್ಕ್‌ಗೆ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಕ್ರಮ: ಆಶೀಶ್ ರೆಡ್ಡಿ

Update: 2020-06-23 15:45 GMT

ಉಡುಪಿ, ಜೂ.23: ಬಡಗಬೆಟ್ಟು ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್ ಪ್ರವೇಶ ಆರಂಭವಾಗಿರುವುದರಿಂದ ಪ್ರವಾಸಿಗರು, ಪರಿಸರ ಪ್ರಿಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ವಿವಿಧ ಯೋಜನೆಗಳನ್ನು ರೂಪಿಸಬೇಕು ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಷ್ ರೆಡ್ಡಿ ತಿಳಿಸಿದ್ದಾರೆ.

ಬಡಗಬೆಟ್ಟುವಿನಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಿಸಲಾಗಿರುವ ಸಾಲು ಮರದ ತಿಮ್ಮಕ್ಕ ಸಸ್ಯೋಧ್ಯಾನದಲ್ಲಿ ಮಂಗಳವಾರ ನಡೆದ ಟ್ರೀ ಪಾರ್ಕ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಟ್ರೀ ಪಾರ್ಕ್‌ನ ವೈಶಿಷ್ಠಗಳ ಕುರಿತು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಗಳಲ್ಲಿ ಆಕರ್ಷಕ ಜಾಹೀರಾತು ಅಳವಡಿಸಬೇಕು. ಇಲ್ಲಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪ್ರವಾಸಿ ಬಸ್‌ಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಪಾರ್ಕ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಔಷಧೀಯ ಸಸ್ಯಗಳನ್ನು ಬೆಳೆಬೇಕು ಎಂದು ಅವರು ಹೇಳಿದರು.

ಟ್ರೀ ಪಾರ್ಕ್‌ನಲ್ಲಿ ಶೌಚಾಲಯ ಸೇರಿದಂತೆ ಅಗತ್ಯವಿರುವ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಪಾರ್ಕ್‌ನಲ್ಲಿ ಪೋಟೋ ಮತ್ತು ವೀಡಿಯೋ ಶೂಟಿಂಗ್ ಮಾಡುವವರಿಂದ ನಿಗದಿತ ಶುಲ್ಕ ಪಡೆಯಬೇಕು ಎಂದು ಅವರು ಸೂಚಿಸಿದರು.

ಬಡಗಬೆಟ್ಟು ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್ ಇಡೀ ರಾಜ್ಯಕ್ಕೇ ಮಾದರಿ ಟ್ರೀ ಪಾರ್ಕ್ ಆಗಿದ್ದು, ಎಲ್ಲಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳ ಮಕ್ಕಳಿಗೆ ಪಾರ್ಕ್‌ಗೆ ಭೇಟಿ ನೀಡಲು ಶಿಕ್ಷಣ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅಗತ್ಯ ಸಹಕಾರ ಪಡೆಯಬೇಕು ಎಂದು ಅಧಿಕಾರಿಗಳಿಗೆ ಆಶೀಶ್ ರೆಡ್ಡಿ ತಿಳಿಸಿದರು.

ಸಭೆಯಲ್ಲಿ ಸಾಮಾಜಿಕ ಅರಣ್ಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಣ್ಣ, ಬಡಗಬೆಟ್ಟು ಗ್ರಾಪಂ ಅಧ್ಯಕ್ಷ ಶಾಂತಾರಾಮ ಶೆಟ್ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ನಾಯಕ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್, ಸಿಆರ್‌ಝಡ್ ಅಧಿಕಾರಿ ಸವಿತಾ, ಎಸ್‌ಡಿಎಂ ಮೆಡಿಕಲ್ ಕಾಲೇಜಿನ ಪ್ರೊ.ಡಾ.ಚೈತ್ರಾ ಹೆಬ್ಬಾರ್ ಹಾಜರಿದ್ದರು.

ಟ್ರೀ ಪಾರ್ಕ್ ನಿರ್ವಹಣಾ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಪರ್ಡ್ ಲೋಬೋ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News