ಸುರಕ್ಷತಾ ಕ್ರಮಗಳೊಂದಿಗೆ ಸಿಇಟಿ ಪರೀಕ್ಷೆ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

Update: 2020-07-24 13:02 GMT

ಉಡುಪಿ, ಜು.24: ಜಿಲ್ಲೆಯಲ್ಲಿ ಜು.30 ಮತ್ತು 31ರಂದು ನಡೆಯುವ ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಕೋವಿಡ್-19ರ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ನಡೆಸಲು ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷೆ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಈ ಬಾರಿಯ ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 3912 ವಿದ್ಯಾರ್ಥಿಗಳು ಹಾಜರಾಗಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 10 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿ(ಎಸ್‌ಓಪಿ) ಪ್ರಕಾರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪರೀಕ್ಷೆಯ ಮೊದಲು ಮತ್ತು ನಂತರ ಕೊಠಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡುವಂತೆ ಸೂಚಿಸಿದರು.

ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಿಸಲು ಥರ್ಮಲ್ ಸ್ಕ್ಯಾನರ್‌ಗಳೊಂದಿಗೆ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಸುರಕ್ಷಿತಾ ಅಂತರ ಪಾಲಿಸಲು ರೇಂಜರ್ಸ್‌ ಮತ್ತು ರೋವರ್ಸ್‌ ಸಹಕಾರ ಪಡೆಯುವಂತೆ ತಿಳಿಸಿದರು. ರೋಗ ಲಕ್ಷಣಗಳಿರುವ ಮತ್ತು ಕಂಟೈನ್‌ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿ ಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಬೇರೆ ರಾಜ್ಯಗಳಿಂದ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಆಗಮಿಸಿದಲ್ಲಿ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಬೇಕಾದ ಅಗತ್ಯವಿಲ್ಲ. ಆದರೆ ಅವರ ವಿವರ ಗಳನ್ನು ನೊಂದಾಯಿಸಿಕೊಂಡು ಪರೀಕ್ಷೆ ನಂತರ ತಮ್ಮ ರಾಜ್ಯಗಳಿಗೆ ಹಿಂದಿರುಗುವ ಬಗ್ಗೆ ಸಂಬಂದಪಟ್ಟ ತಹಶೀಲ್ದಾರ್‌ಗಳು ಖಾತರಿಪಡಿಸಿ ಕೊಳ್ಳುವಂತೆ ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ವಿತರಿಸಲು ನಿಯೋಜಿಸಿರುವ ಅಧಿಕಾರಿ ಗಳು, ಖಜಾನೆಯಲ್ಲಿ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆ ಪಡೆದು ಪೊಲೀಸ್ ಭದ್ರತೆಯೊಂದಿಗೆ ಪ್ರಶ್ನೆ ಪತ್ರಿಕೆ ವಿತರಿಸಿ, ಪರೀಕ್ಷೆ ನಂತರ ಜಿಲ್ಲಾ ಖಜಾನೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾದಿಕಾರಿ ಸೂಚಿಸಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಅವರು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಪರೀಕ್ಷೆಗೆ ಹಾಜರಾಗಲು ಅನುಕೂಲ ವಾಗುವಂತೆ ಸುರಕ್ಷತಾ ಅಂತರ ಪಾಲನೆಯಾಗುವಂತೆ ಅಗತ್ಯ ಸಂಖ್ಯೆಯ ಬಸ್ ಗಳನ್ನು ಓಡಿಸುವಂತೆ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು, ಪ.ಪೂ. ಇಲಾಖೆಯ ಉಪ ನಿರ್ದೇಶಕ ಭಗವಂತ ಕಟ್ಟೀಮನಿ, ಡಿಡಿಪಿಯ ಶೇಷಶಯನ ಕಾರಿಂಜ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News