ಡಾ.ನಾಗೇಂದ್ರ ಆತ್ಮಹತ್ಯೆ: ಸಂತ್ರಸ್ತ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Update: 2020-08-21 06:15 GMT

ಮೈಸೂರು, ಆ.21: ನಂಜನಗೂಡು ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಅವರ ಆತ್ಮಹತ್ಯೆಗೆ ಸಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡುವಂತೆ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದು, ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನೂ ಘೋಷಿಸಿದ್ದಾರೆ.

ಡಾ.ನಾಗೇಂದ್ರ ಅವರ ಆತ್ಮಹತ್ಯೆಯು ತುಂಬಾ ನೋವಿನ ಸಂಗತಿಯಾಗಿದ್ದು, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಮುಖ್ಯಮಂತ್ರು ಪ್ರಾರ್ಥಿಸಿದ್ದಾರೆ.
 
ಮೃತ ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ರೂ. ಹಾಗೂ ಅವರ ಕುಟುಂಬುದ ಅವಲಂಬಿತರೊಬ್ಬರಿಗೆ ಅನುಕಂಪದ ಆದಾರದ ಮೇಲೆ ಸರ್ಕಾರಿ ನೌಕರಿ ನೀಡುವುದರ ಜೊತೆಗೆ ಸರ್ಕಾರದಿಂದ ದೊರೆಯಬಹುದಾದ ಇನ್ನಿತರ ಸೌಲಭ್ಯಗಳನ್ನು ವಿಳಂಬ ಮಾಡದೆ ಪಾವತಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಕೋವಿಡ್ ಕರ್ತವ್ಯದಲ್ಲಿರುವ ಎಲ್ಲಾ ಸರ್ಕಾರಿ ನೌಕರರು ಯಾವುದೇ ಒತ್ತಡಗಳಿದ್ದಲ್ಲಿ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಜೊತೆ ಇದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ಸಂಬಂಧಿಸಿದ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಮನವಿ ಸಲ್ಲಿಸಿ, ನಂಜನಗೂಡು ತಾಲ್ಲೂಕು ಪ್ರಭಾರ ಆರೋಗ್ಯ ಅಧಿಕಾರಿಯಾಗಿದ್ದ ಡಾ.ಎಸ್.ಆರ್.ನಾಗೇಂದ್ರ ಅವರು ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಗೂ ಈ ಸಂಬಂಧ ನಿಷ್ಪಕ್ಷಪಾತ ತನಿಖೆ ಮಾಡಿ ಮತ್ತು ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ನೌಕರರು ನೆಮ್ಮದಿಯಿಂದ ಕೆಲಸ ಮಾಡುವಂತೆ ವಿನಂತಿಸಿದ್ದರು.

ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ತನಿಖೆಗೆ ಆದೇಶಿಸಿ ಮಾಧ್ಯಮ ಹೇಳಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News