ಉಡುಪಿ: ಶುಕ್ರವಾರ 278 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

Update: 2020-08-21 13:55 GMT

ಉಡುಪಿ, ಆ.21: ಶುಕ್ರವಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 278 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 9668ನ್ನು ತಲುಪಿದೆ. ದಿನದಲ್ಲಿ 1516 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೋವಿಡ್ ಪಾಸಿಟಿವ್ ಪತ್ತೆಯಾದ 278 ಮಂದಿಯಲ್ಲಿ ಉಡುಪಿ ತಾಲೂಕಿನ 159 ಮಂದಿ, ಕುಂದಾಪುರ ತಾಲೂಕಿನ 99 ಹಾಗೂ ಕಾರ್ಕಳ ತಾಲೂಕಿನ 14 ಮಂದಿ ಸೇರಿದ್ದು, ಉಳಿದಂತೆ ಹೊರಜಿಲ್ಲೆಯ ಆರು ಮಂದಿ ಚಿಕಿತ್ಸೆಗೆಂದು ಜಿಲ್ಲೆಗೆ ಬಂದು ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 157 ಮಂದಿ ಪುರುಷರು ಹಾಗೂ 121 ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 99 ಪುರುಷರು ಹಾಗೂ 94 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂದು ಡಾ.ಸೂಡ ತಿಳಿಸಿದರು.

ಶುಕ್ರವಾರ ಪಾಸಿಟಿವ್ ದೃಢಗೊಂಡ 278 ಮಂದಿಯಲ್ಲಿ 114 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 68 ಮಂದಿ ಶೀತಜ್ವರದಿಂದ, 6 ಮಂದಿ ಉಸಿರಾಟ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ಇನ್ನು ದೇಶೀಯ ಪ್ರವಾಸದಿಂದ ಮರಳಿದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ 89 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆಯಾಗಬೇಕಿದೆ ಎಂದರು.

365 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಶುಕ್ರವಾರ 365 ಮಂದಿ ಚಿಕಿತ್ಸೆಯ ನಂತರ ರೋಗದಿಂದ ಚೇತರಿಸಿಕೊಂಡು ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 204 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 161 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 6857ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2729 ಮಂದಿ ಇನ್ನೂ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 1130 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1599 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

1516 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಶುಕ್ರವಾರ 1516 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 679 ಮಂದಿ, ಕೋವಿಡ್ ಸಂಪರ್ಕಿತರು 188 ಮಂದಿ ಇದ್ದರೆ, ಉಸಿರಾಟ ತೊಂದರೆಯ 7 ಮಂದಿ, ಶೀತಜ್ವರ ದಿಂದ ಬಳಲುವ 36 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 606 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪರೀಕ್ಷೆಗಾಗಿ ಪಡೆದ 1516 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 62,767ಕ್ಕೇರಿದೆ. ಇವುಗಳಲ್ಲಿ ಈವರೆಗೆ 52,082 ನೆಗೆಟಿವ್, 9668 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 82 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1017 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಇಂದು 278 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಒಟ್ಟು 86 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 192 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ ಎಂದು ಅವರು ಹೇಳಿದರು.

ಕಾರ್ಕಳದ ಮಹಿಳೆ ಸಾವು: ಶುಕ್ರವಾರ ಕೊರೋನ ಸೋಂಕಿನಿಂದ ಕಾರ್ಕಳ ತಾಲೂಕು ಗುಡ್ಡೆಯಂಗಡಿಯ 73 ವರ್ಷದ ಮಹಿಳೆಯೊಬ್ಬರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಿಡ್ನಿ ಹಾಗೂ ಇತರ ಸಮಸ್ಯೆಗಳಿಗಾಗಿ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಯಲ್ಲಿದ್ದರು ಎಂದು ಹೇಳಲಾಗಿದೆ.

ಕಿಡ್ನಿ, ಡಯಾಬಿಟೀಸ್ ಸಮಸ್ಯೆಗಳಿಗಾಗಿ ಚಿಕಿತ್ಸೆಯಲ್ಲಿ ಕುಂದಾಪುರದ 61ವರ್ಷ ಪ್ರಾಯದ ಪುರುಷ ಹಾಗೂ ಮಧುಮೇಹ, ಹೃದಯ ಸಮಸ್ಯೆಗೆ ತುತ್ತಾಗಿದ್ದ ಉಡುಪಿಯ 80ರ ಹರೆಯದ ವೃದ್ಧರು ಕೊರೋನ ಸೋಂಕಿನೊಂದಿಗೆ ಬುಧವಾರ ಮೃತ ಪಟ್ಟಿವುದಾಗಿ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News