ಇಂದು ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

Update: 2020-11-07 04:56 GMT

ಬಂಟ್ವಾಳ, ನ.7: ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಕುತೂಹಲ ಮೂಡಿಸಿದೆ. 

ಬೆಳಗ್ಗೆ 10:30ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ಸಮಯವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಶರೀಫ್ ಶಾಂತಿಅಂಗಡಿ, ಬಿಜೆಪಿಯಿಂದ ಗೋವಿಂದ ಪ್ರಭು, ಎಸ್.ಡಿ.ಪಿ.ಐ.ಯಿಂದ ಮುನೀಶ್ ಅಲಿ ನಾಮಪತ್ರ ಸಲ್ಲಿಸಿದ್ದಾರೆ.

ಉಪಾಧ್ಯಕ್ಷೆ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಜೆಸಿಂತಾ ಡಿಸೋಜ, ಬಿಜೆಪಿಯಿಂದ ಮೀನಾಕ್ಷಿ ಗೌಡ ನಾಮಪತ್ರ ಸಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷೆ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿದೆ. ಮೀಸಲಾತಿ ಪ್ರಕಾರ ಉಪಾಧ್ಯಕ್ಷೆ ಸ್ಥಾನಕ್ಕೆ ಬೇಕಾದ ಅರ್ಹ ಅಭ್ಯರ್ಥಿ ಎಸ್.ಡಿ.ಪಿ.ಐ. ಬಳಿ ಇಲ್ಲ.

ಮಧ್ಯಾಹ್ನ 12:30 ನಾಮಪತ್ರ ವಾಪಸ್ ಪಡೆಯಲು ಕೊನೆಯ ಸಮಯವಾಗಿದ್ದು 1 ಗಂಟೆಗೆ ಮತದಾನ ನಡೆಯಲಿದೆ. ಚುನಾವಣಾ ಅಧಿಕಾರಿಯಾಗಿ ಬಂಟ್ವಾಳ ತಹಶಿಲ್ದಾರ್ ಎಸ್.ಆರ್.ರಶ್ಮಿ ಕರ್ತವ್ಯನಿರ್ವಹಿಸುತ್ತಿದ್ದಾರೆ.

ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ 12, ಬಿಜೆಪಿ 11, ಎಸ್.ಡಿ.ಪಿ.ಐ. 4 ಸದಸ್ಯ ಬಲವನ್ನು ಹೊಂದಿದೆ. ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಸ್ಥಳೀಯ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ರಾಜೇಶ್ ನಾಯ್ಕ್ ಮತದಾನದ ಹಕ್ಕನ್ನು ಹೊಂದಿದ್ದಾರೆ. ಹೀಗಾಗಿ ಒಟ್ಟು 29 ಮಂದಿ ಮತದಾನದ ಹಕ್ಕನ್ನು ಹೊಂದಿದ್ದು ಬಹುಮತಕ್ಕೆ 15 ಮತಗಳ ಅಗತ್ಯವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News