ಕೋವಿಡ್-19 ಜಾಗೃತಿ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ

Update: 2020-11-14 13:51 GMT

ಉಡುಪಿ, ನ.14: ಕೋವಿಡ್-19ಕ್ಕೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ಲಭ್ಯ ವಾಗಿ, ಈ ರೋಗ ಜಾಗತಿಕವಾಗಿ ನಿರ್ಮೂಲನಗೊಳ್ಳುವವರೆಗೆ ಸಾರ್ವಜನಿಕರು ಕೋವಿಡ್ ನಿಯಂತ್ರಣಾ ಕ್ರಮಗಳನ್ನು ತಮ್ಮ ದೈನಂದಿನ ಜೀವನದಲ್ಲಿ ತಪ್ಪದೇ ಪಾಲಿಸಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಉಡುಪಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆವರಣ ದಲ್ಲಿ ಕೋವಿಡ್-19ರ ಕುರಿತಂತೆ ಜಿಲ್ಲೆಯಾದ್ಯಂತ ಎಲ್‌ಇಡಿ ವಾಹನದ ಮೂಲಕ ನಡೆಯುವ ವಿಶೇಷ ಜಾಗೃತಿ ಪ್ರಚಾರ ಕಾರ್ಯಕ್ರಮದ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರಿಸಿ ಅವರು ಮಾತನಾಡು ತಿದ್ದರು.

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಸಾರ್ವಜನಿಕರು ಜಿಲ್ಲೆಯಲ್ಲಿ ಕೋವಿಡ್ ಇಲ್ಲ ಎಂದು ಮೈಮರೆಯದೇ, ಸಂಪೂರ್ಣವಾಗಿ ಈ ರೋಗ ನಿರ್ಮೂಲನವಾಗುವವರೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸುರಕ್ಷಿತಾ ಅಂತರ ಪಾಲನೆ ಮತ್ತು ಕೈಗಳ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು. ಕೋವಿಡ್ ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷಿಸಿಕೊಳ್ಳುವಂತೆ ದಿನಕರ ಬಾಬು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ವಾರ್ತಾ ಸಹಾಯಕ ಶಿವಕುಮಾರ್ ಬಿ. ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯಾದ್ಯಂತ ಪ್ರತಿದಿನ 10 ಗ್ರಾಮಗಳಲ್ಲಿ 18 ದಿನಗಳ ಕಾಲ ಒಟ್ಟು 180 ಗ್ರಾಮಗಳಲ್ಲಿ ಸಂಚರಿಸುವ ಈ ಎಲ್‌ಇಡಿ ವಾಹನ ಬೃಹತ್ ಎಲ್‌ಇಡಿ ಪರದೆಯ ಮೂಲಕ ಗ್ರಾಮೀಣ ಭಾಗದಲ್ಲಿ ಕೋವಿಡ್-19 ಪಿಡುಗನ್ನು ತಡೆಗಟ್ಟಲು ಸಾರ್ವಜನಿಕರು ಕೈಗೊಳ್ಳಬೇಕಾದ ಸುರಕ್ಷತಾ/ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News