ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ

Update: 2020-11-17 14:24 GMT

ಬೆಂಗಳೂರು, ನ.17: ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಗಮ ಸ್ಥಾಪಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮುದಾಯ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ಬೆನ್ನೆಲ್ಲೇ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಒತ್ತಡ ಕೇಳಿ ಬಂದಿತ್ತು. ಮಾಜಿ ಸಚಿವ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಸೋಮಣ್ಣ, ಬಿ.ಸಿ.ಪಾಟೀಲ್ ಸೇರಿದಂತೆ ಲಿಂಗಾಯತ ಸಮುದಾಯದ ಹಲವು ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟ ಭೇಟಿಯಾಗಿ ಮನವಿ ಮಾಡಿದ್ದರು.

ಅನುದಾನ ಬಿಡುಗಡೆಯಾಗಿಲ್ಲ: ಲಿಂಗಾಯತ ಸಮುದಾಯ ನಾಯಕರ ಒತ್ತಾಯದ ನಡುವೆ ತರಾತುರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ-ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಆದರೆ, ನಿಗಮಕ್ಕೆ ಅನುದಾನವನ್ನು ಬಿಡುಗಡೆ ಮಾಡಿಲ್ಲ.

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯಾಗುತ್ತಿದ್ದಂತೆ ರಾಜ್ಯಾದ್ಯಂತ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ, ಪಿಂಜಾರ ಸಮುದಾಯ ಸೇರಿದಂತೆ ಹಲವು ಸಮುದಾಯಗಳ ನಾಯಕರು, ತಮ್ಮ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News