ಪಾರ್ಕಿಂಗ್ ನೀತಿ 2.0 ಪರಾಮರ್ಶಿಸಿ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

Update: 2020-12-01 13:08 GMT

ಬೆಂಗಳೂರು, ಡಿ.1: ಬೆಂಗಳೂರು ನಗರದಲ್ಲಿ ವಾಹನ ನಿಲುಗಡೆ ಕುರಿತಂತೆ ಪಾರ್ಕಿಂಗ್ ನೀತಿಯನ್ನು ಪರಿಷ್ಕರಿಸಿ, ಪಾರ್ಕಿಂಗ್ ನೀತಿ 2.0 ಯನ್ನು ರೂಪಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಸರಕಾರದ ಅನುಮೋದನೆ ಸಲ್ಲಿಸಿರುವ ಪಾರ್ಕಿಂಗ್ ನೀತಿ 2.0ನ್ನು ಪರಾಮರ್ಶಿಸಿ, ಪರಿಷ್ಕರಿಸಿ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಗೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ ಕಳೆದ 7 ವರ್ಷಗಳಲ್ಲಿ ವಾಹನಗಳ ಸಂಖ್ಯೆ ದ್ವಿಗುಣಗೊಂಡಿದೆ. ಅನಿಯಂತ್ರಿತ ರಸ್ತೆ ಪಾರ್ಕಿಂಗ್‍ನಿಂದಾಗಿ ಸಂಚಾರ ದಟ್ಟಣೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ನಿಯಂತ್ರಿತ, ತಂತ್ರಜ್ಞಾನ ಆಧಾರಿತ ಪಾರ್ಕಿಂಗ್ ವ್ಯವಸ್ಥೆ ರೂಪಿಸುವುದರೊಂದಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಾರ್ಕಿಂಗ್ ನೀತಿ 2.0 ನ್ನು ರೂಪಿಸಲಾಗುತ್ತಿದೆ.

ಪ್ರಸ್ತುತ ಪಾರ್ಕಿಂಗ್ ನೀತಿ ಕುರಿತಂತೆ ಸ್ವಯಂ ಸೇವಾ ಸಂಸ್ಥೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ವ್ಯಕ್ತಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ಈ ಅಭಿಪ್ರಾಯಗಳನ್ನು ಆಧರಿಸಿ, ನವೀಕರಿಸಿದ ನೀತಿಯನ್ನು ಸರಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳು ಸಭೆ ಸೇರಿ ಪಾರ್ಕಿಂಗ್ ನೀತಿಯನ್ನು ಪರಾಮರ್ಶಿಸಿ, ಪರಿಷ್ಕರಿಸಿ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ನಗರ ಭೂಸಾರಿಗೆ ನಿರ್ದೇಶನಾಲಯದ ಆಯಕ್ತ ವಿ.ಮಂಜುಳಾ, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಸಂಗ್ರಹಿಸಲು ಮತ್ತು ಸಂಚಾರ ಶಿಸ್ತನ್ನು ತರುವ ನಿಟ್ಟಿನಲ್ಲಿ ಪಾರ್ಕಿಂಗ್ ನೀತಿ ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ. ಪಾರ್ಕಿಂಗ್ ಶುಲ್ಕವನ್ನು ಯಾವ ರೀತಿ ಸಂಗ್ರಹಿಸಬೇಕು ಸೇರಿದಂತೆ ಇನ್ನಿತರ ಮಾನದಂಡಗಳು, ಮಾರ್ಗಸೂಚಿ ತಯಾರಿಸಿ ಕರಡು ನೀತಿಯನ್ನು ಸಿದ್ಧಪಡಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ನೂತನ ಪಾರ್ಕಿಂಗ್ ನೀತಿಯಿಂದ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಿ, ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ತಪ್ಪಿಸಲು ಉದ್ದೇಶಿಸಲಾಗಿದೆ.

-ಎಸ್.ಆರ್.ವಿಶ್ವನಾಥ್, ಬಿಡಿಎ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News