ಒಂದೇ ದಿನ 32,080 ಹೊಸ ಕೊರೋನ ಪ್ರಕರಣಗಳು ವರದಿ

Update: 2020-12-09 16:55 GMT

ಹೊಸದಿಲ್ಲಿ, ಡಿ. 8: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನ ಸೋಂಕಿನ 32,080 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ 97,35,850ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 402 ಮಂದಿ ಕೊರೋನ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೋನ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 1,41,360ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೊರೋನ ಸೋಂಕಿನ ಪ್ರಕರಣಗಳ ಒಟ್ಟು ಸಂಖ್ಯೆ 3,78,909ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 36,635 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಸೇರಿದಂತೆ ಒಟ್ಟು 92,15,581ಕ್ಕೂ ಅಧಿಕ ಜನರು ಗುಣಮುಖರಾಗಿದ್ದಾರೆ. ಮಹಾರಾಷ್ಟ್ರದಲ್ಲಿ 74,460 ಸಕ್ರಿಯ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಅನಂತರದ ಸ್ಥಾನವನ್ನು ಕೇರಳ ಪಡೆದುಕೊಂಡಿದ್ದು, ಇಲ್ಲಿ 59,873 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದಿಲ್ಲಿಯಲ್ಲಿ 22,310 ಸಕ್ರಿಯ ಪ್ರಕರಣಗಳು ವರದಿಯಾಗಿವೆ. 5,65,039 ಕೊರೋನ ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ 9,763 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ನಡುವೆ ಡಿಸೆಂಬರ್ 8ರ ವರೆಗೆ ಒಟ್ಟು 14,98,36,767 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 10,22,712 ಮಾದರಿಗಳನ್ನು ನಿನ್ನೆ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News