ಕ್ರಿಸ್ಮಸ್, ಹೊಸ ವರ್ಷ ಸರಳವಾಗಿ ಆಚರಿಸಿ : ಜಿಲ್ಲಾಧಿಕಾರಿ ರಾಜೇಂದ್ರ

Update: 2020-12-22 14:52 GMT

ಮಂಗಳೂರು, ಡಿ.22: ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದು ಕೊಂಡಿದ್ದು, ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷವನ್ನು ಸರಳವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸುರಕ್ಷಿತ ಅಂತರ ಕಾಯ್ದುಕೊಳ್ಳಲು ಚರ್ಚ್‌ನ ಮೇಲ್ವಿಚಾರಕರು/ ಕಾರ್ಯಕ್ರಮ ಆಯೋಜಕರು ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕು. ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತ ಲಾಘವ ಹಾಗೂ ಆಲಿಂಗನವನ್ನು ನಿಷೇಧಿಸಲಾಗಿದೆ.

ಡಿ.30ರಿಂದ ಜ.2ರವರೆಗೆ ಕ್ಲಬ್/ಪಬ್/ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ/ಪ್ರದೇಶಗಳಲ್ಲಿ ಸುರಕ್ಷಿತ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ ಡ್ಯಾನ್ಸ್ ಕಾರ್ಯಕ್ರಮ, ವಿಶೇಷ ಪಾರ್ಟಿಗಳನ್ನು ನಿಷೇಧಿಸಿದೆ. ಆದರೆ ಕ್ಲಬ್/ಪಬ್ ರೆಸ್ಟೋರೆಂಟ್‌ಗಳ ದೈನಂದಿನ ವ್ಯವಹಾರ ನಡೆಸಲು ಯಾವುದೇ ನಿರ್ಬಂಧವಿಲ್ಲ.

65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಮತ್ತು ಹೋಟೆಲ್/ಮಾಲ್/ಪಬ್/ ರೆಸ್ಟೋರೆಂಟ್ ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿಸಲು ಮಾಲಕರು ಕಡ್ಡಾಯವಾಗಿ ವ್ಯವಸ್ಥೆ ಮಾಡಿರಬೇಕು.

ರಾಷ್ಟ್ರೀಯ, ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News