ಎದ್ದೇಳಿ, ರೈತರ ಚಳವಳಿಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದ ದಿಗ್ವಿಜಯ ಸಿಂಗ್

Update: 2020-12-26 15:57 GMT

ಹೊಸದಿಲ್ಲಿ, ಡಿ. 26: ಎದ್ದೇಳಿ, ಕೇಂದ್ರ ಸರಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡಲು ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಶನಿವಾರ ತನ್ನ ಪಕ್ಷದ ಸದಸ್ಯರಲ್ಲಿ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅನ್ಯಾಯ ಎಸಗಿರುವುದರಿಂದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹರ್ಯಾಣ, ಪಂಜಾಬ್, ಉತ್ತರಪ್ರದೇಶ ಹಾಗೂ ರಾಜಸ್ಥಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಧ್ಯಪ್ರದೇಶದ ರೈತರು ಅಮಾಯಕರು. ಆದರೆ, ಕಾಂಗ್ರೆಸಿಗರು ನಿದ್ದೆ ಮಾಡುತ್ತಿದ್ದಾರೆ. ಎದ್ದೇಳಿ. ರೈತರ ಚಳವಳಿಯಲ್ಲಿ ಪಾಲ್ಗೊಳ್ಳಿ. ಈ ಕಾಯ್ದೆಗಳ ವಿರುದ್ಧ ಧ್ವನಿ ಎತ್ತಿ ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಕೃಷಿ ಕಾಯ್ದೆಗಳ ಕುರಿತು ಯಾವುದೇ ರೀತಿಯ ಗೊಂದಲ ಇಲ್ಲ. ಕೃಷಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪ್ರತಿಪಾದಿಸಿದ ಬಳಿಕ ದಿಗ್ವಿಜಯ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

‘‘ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ಮಧ್ಯಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಕಾಯ್ದೆಗಳ ಬಗ್ಗೆ ಯಾವುದೇ ಗೊಂದಲ ಇಲ್ಲ. ರಾಜ್ಯದ ಎಲ್ಲ 343 ಬ್ಲಾಕ್‌ಗಳಲ್ಲಿ ನಾವು ಈ ಕಾಯ್ದೆಗಳ ಬಗ್ಗೆ ತರಬೇತಿ ಆಯೋಜಿಸಲಿದ್ದೇವೆ. ಇದರಿಂದ ನಮ್ಮ ರೈತರು ಈ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲು ಹಾಗೂ ಅದರ ಪ್ರಯೋಜನ ಅರಿತುಕೊಳ್ಳಲು ಸಾಧ್ಯವಾಗುತ್ತದೆ’’ ಎಂದು ಚೌಹಾಣ್ ಅವರು ಇಂದು ಬೆಳಗ್ಗೆ ಹೇಳಿದ್ದರು. ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೇಂದ್ರ ಸರಕಾರ ಆಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ ಬಳಿಕ ದಿಗ್ವಿಜಯ ಸಿಂಗ್ ಅವರು ಈ ಹೇಳಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News