​ಗ್ರಾಮೀಣ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಆದ್ಯತೆ: ಸಚಿವ ಬೊಮ್ಮಾಯಿ

Update: 2021-06-28 14:45 GMT

ಕಾರ್ಕಳ, ಜೂ.28: ಹೊರಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶಗಳಿಂದ ತಾಲೂಕು ಕೇಂದ್ರಗಳಿಗೆ ವಿದ್ಯಾಭ್ಯಾಸಕ್ಕಾಗಿ ವಲಸೆ ಬರುವ ಹೆಣ್ಣು ಮಕ್ಕಳಿಗೆ ತಂಗಲು ಅನುಕೂಲವಾಗುವಂತೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೂತನವಾದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೋಮವಾರ ಕಾರ್ಕಳದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ನಿರ್ಮಿತಿ ಕೇಂದ್ರ ಉಡುಪಿ ಇವರಿಂದ ಸುಮಾರು 1.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ವಿದ್ಯಾರ್ಥಿಗಳು ಅತ್ಯಂತ ಶಿಸ್ತು, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ವಿದ್ಯಾರ್ಜನೆ ಮಾಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡು ಅದರ ಮೂಲಕ ನಾಡಿನ ಭವಿಷ್ಯವನ್ನು ರೂಪಿಸಲು ಮಾದರಿಯಾಗಬೇಕು.ಸಮಾಜ ನಿರ್ಮಾಣದ ಕೇಂದ್ರ ಬಿಂದುವಾದ ಹೆಣ್ಣು ಮಕ್ಕಳಿಗೆ ಸರಕಾರ ಆಧುನಿಕ ಶಿಕ್ಷಣವನ್ನು ನೀಡಿದಲ್ಲಿ ಸುಸಜ್ಜಿತ ಹಾಗೂ ಅಕ್ಷರಭರಿತ ಜನಾಂಗ ನಿರ್ಮಾಣ ಮಾಡುವಲ್ಲಿ ಯಶಸ್ಸು ಸಾಧಿಸಬಹುದು ಎಂದರು.

ರಾಜ್ಯ ಸರಕಾರದ ಸಚೇತಕ ಹಾಗೂ ಕಾರ್ಕಳ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣಗೊಂಡ ಈ ವಸತಿ ಶಾಲೆ ಇನ್ನಷ್ಟು ವಿದ್ಯಾರ್ಥಿಗಳನ್ನು ಆರ್ಕಷಿಸುವಂತಾಗಲಿ. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾಭ್ಯಾಸ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರುವಂತಹ ಒಳ್ಳೆಯ ವಾತಾವರಣ ನಿರ್ಮಾಣಗೊಳ್ಳಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News