ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲರಾಗಿ ಡಾ.ಗಣನಾಥ ಎಎಕ್ಕಾರು

Update: 2021-07-11 15:11 GMT

ಉಡುಪಿ, ಜು.11: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ನೂತನ ಪ್ರಾಂಶು ಪಾಲರಾಗಿ ತುಳು ವಿದ್ವಾಂಸ, ಲೇಖಕ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಧಿಕಾರ ಸ್ವೀಕರಿಸಿದ್ದಾರೆ. ಡಾ.ಎಕ್ಕಾರು ಅವರಿಗೆ ಸೇವಾ ನಿವೃತ್ತರಾದ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಹೆಗ್ಡೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ.ವಸಂತರಾಜ ಶೆಟ್ಟಿ ಉಪಸ್ಥಿತರಿದ್ದರು.

ಡಾ.ಎಕ್ಕಾರು ಕರ್ನಾಟಕ ಸರಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ರಾಜ್ಯ ಎನ್ನೆಸ್ಸೆಸ್ ಕೋಶದಲ್ಲಿ ರಾಜ್ಯ ಎನ್ನೆಸ್ಸೆಸ್ ಅಧಿಕಾರಿ ಹಾಗೂ ಸರಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿಯಾಗಿ ಆರು ವರ್ಷ ಸೇವೆ ಸಲ್ಲಿಸಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆಯ ವಿವಿಧ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ, ಸಹ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಕ ಪ್ರಾಂಶುಪಾಲರಾಗಿ ಈಗಾಗಲೇ ನಾಲ್ಕು ವರ್ಷ ಸೇವೆ ಸಲ್ಲಿಸಿರುವ ಡಾ.ಗಣನಾಥ ಎಕ್ಕಾರು, ಜಾನಪದ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹಲವು ವೌಲಿಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಮಂಗಳೂರು ವಿವಿ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಯಾಗಿ, ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಇವರು ಎನ್ನೆಸ್ಸೆಸ್‌ಗೆ ಸಲ್ಲಿಸಿದ ಸೇವೆಗಾಗಿ ರಾಜ್ಯ ಸರಕಾರದಿಂದ ಅತ್ಯುತ್ತಮ ಸಂಯೋಜನಾಧಿಕಾರಿಯಾಗಿ ರಾಜ್ಯ ಪ್ರಶಸ್ತಿ ಹಾಗೂ ಕೇಂದ್ರ ಸರಕಾರದಿಂದ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News