ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಗೆ ಓರ್ವ ಬಲಿ; 97 ಮಂದಿಗೆ ಪಾಸಿಟಿವ್

Update: 2021-09-04 14:47 GMT

ಉಡುಪಿ : ಜಿಲ್ಲೆಯಲ್ಲಿ ಶನಿವಾರ ಹಿರಿಯ ನಾಗರಿಕರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದು, 97 ಮಂದಿಯಲ್ಲಿ ಹೊಸದಾಗಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ದಿನದಲ್ಲಿ 137 ಮಂದಿ ಸೋಂಕಿನಿಂದ ಚೇತರಿಸಿ ಕೊಂಡರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1372ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ ಕುಂದಾಪುರ ತಾಲೂಕಿನ 67 ವರ್ಷ ಪ್ರಾಯದ ಹಿರಿಯರೊಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾಂಕ್ರಾಮಿಕಕ್ಕೆ ಬಲಿಯಾದವರ ಸಂಖ್ಯೆ 457ಕ್ಕೇರಿದೆ. ಕೋವಿಡ್ ಗುಣಲಕ್ಷಣ, ಉಸಿರಾಟ ತೊಂದರೆಯಿಂದ ಬಳಲಿದ್ದ ಇವರನ್ನು ಆ.21ಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.

ಕೊರೋನ ಸೋಂಕು ದೃಢಪಟ್ಟ 97 ಮಂದಿಯಲ್ಲಿ 35 ಮಂದಿ ಪುರುಷರು ಹಾಗೂ 62 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 62 ಮಂದಿ ಉಡುಪಿ ತಾಲೂಕು, 17 ಮಂದಿ ಕುಂದಾಪುರ ಹಾಗೂ 18 ಮಂದಿ ಕಾರ್ಕಳ ತಾಲೂಕಿನವರು. ಇವರಲ್ಲಿ 21 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 76 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

10 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ: ಶುಕ್ರವಾರ 137 ಮಂದಿ ಸೋಂಕಿ ನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 72,513ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 7207 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 74,342ಕ್ಕೇರಿದೆ.

ಇಂದು 7207 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವ ಮೂಲಕ ಉಡುಪಿ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ಸೋಂಕಿನ ಪರೀಕ್ಷೆಗೆ ಒಡ್ಡಿಕೊಂಡವರ ಸಂಖ್ಯೆ 10 ಲಕ್ಷ ದಾಟಿದೆ. ಇಂದಿನವರೆಗೆ ಜಿಲ್ಲೆಯಲ್ಲಿ ಒಟ್ಟು 10,00,961 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ

10,931 ಡೋಸ್ ಲಸಿಕೆ ವಿತರಣೆ: ಜಿಲ್ಲೆಯಲ್ಲಿ ಶನಿವಾರ 10,931 ಮಂದಿ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 6,804 ಮಂದಿ ಮೊದಲ ಡೋಸ್ ಹಾಗೂ 4127 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

18ರಿಂದ 44ವರ್ಷದೊಳಗಿನ 4,926 ಮಂದಿ ಮೊದಲ ಹಾಗೂ 2,495 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 1878 ಮಂದಿಗೆ ಮೊದಲ ಹಾಗೂ 1632 ಮಂದಿಗೆ ಎರಡನೆೀ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಶನಿವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 7,95,542 ಮಂದಿ ಮೊದಲ ಡೋಸ್‌ನ್ನು ಪಡೆದರೆ, 2,86,108 ಮಂದಿ ಎರಡೂ ಡೋಸ್‌ಗಳನ್ನು ಸ್ವೀಕರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News