ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿ: ಹರೇಕಳ ಹಾಜಬ್ಬ

Update: 2021-11-17 15:47 GMT

ಉಡುಪಿ, ನ.17: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಕಾರ್ಯ ಮಾಡಬೇಕು ಎಂದು ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್‌ ಹಾಗೂ ರೇಂಜರ್ಸ್‌ ಘಟಕಗಳ ವತಿಯಿಂದ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬುಧವಾರ ಹಮ್ಮಿಕೊಳ್ಳಲಾದ 'ಆರೇಂಜ್ ಇಸ್ ನಾಟ್ ಜಸ್ಟ್ ಫ್ರೂಟ್' ಎಂಬ ವಿಶೇಷ ಸಂವಾದ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಯಾಗಿ ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬ ಪ್ರಜೆಗೂ ಅನ್ನ, ಆರೋಗ್ಯ ಮತ್ತು ಶಿಕ್ಷಣ ನೀಡುವುದು ಸರಕಾರದ ಜವಾಬ್ದಾರಿ. ಇದರಿಂದ ದೇಶದ ಬೆಳವಣಿಗೆ ಸಾಧ್ಯವಾಗುತ್ತದೆ. ಫಲಾಪೇಕ್ಷೆ ಇಲ್ಲದ ಸೇವೆಗಳನ್ನು ಸಮಾಜ ಗುರುತಿಸುತ್ತದೆ. ಸರಕಾರ ಅವರನ್ನು ಗೌರವಿಸುತ್ತದೆ ಎಂಬುದಕ್ಕೆ ಹಾಜಬ್ಬ ಅವರೇ ಸಾಕ್ಷಿ ಎಂದರು.

ಎಲ್ಲಾ ಕೆಲಸವನ್ನು ಸರಕಾರವೇ ಮಾಡಲು ಸಾಧ್ಯವಿಲ್ಲ. ಸಮಷ್ಟಿ ಕಾರ್ಯ ದಿಂದ ಅಭಿವೃದ್ಧಿ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ದೇಶಕ್ಕೆ ಕೊಡುಗೆ ನೀಡಬೇಕು. ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಎಲ್ಲಾ ಕ್ಷೇತ್ರದಲ್ಲಿ ಬೆಳೆಯಲು ವಿಫುಲ ಅವಕಾಶಗಳಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮೂಲಕ ಅನೇಕ ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ಸ್ವಾತಂತ್ರೋತ್ತರ ಉಡುಪಿ ಜಿಲ್ಲೆಯಲ್ಲಿ ಶಿಕ್ಷಣ ಕ್ರಾಂತಿಗೆ ಕಾರಣರಾದ ಮಾಧವ ಅನಂತ ಪೈ ಅವರಿಗೆ ಭಾರತರತ್ನ ಪ್ರಶಸ್ತಿ ದೊರೆಯಬೇಕು ಎಂದು ಅವರು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕೂರ್ಮ ರಾವ್ ಮಾತನಾಡಿದರು. ಎಂಜಿಎಂ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಪಿಯು ಕಾಲೇಜು ಪ್ರಾಂಶುಪಾಲೆ ಮಾಲತಿ ದೇವಿ, ಲೋಕಾಯುಕ್ತ ಎಸ್ಪಿ ಕುಮಾರ ಸ್ವಾಮಿ, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಉಪಸ್ಥಿತರಿದ್ದರು. ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ಸುಚಿತ್ ಕೊಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News