ಯುವ ವಿಜ್ಞಾನಿ ಸ್ಪರ್ಧೆಗೆ ಅರ್ಜಿ ಆಹ್ವಾನ
ಬೆಂಗಳೂರು, ನ. 25: ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ 9-12ನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಎಳೆಯ ವಯಸ್ಸಿನಲ್ಲೇ `ವೈಜ್ಞಾನಿಕ ವಿಧಾನ'ದ ಮನವರಿಕೆ, ಅವರನ್ನು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸುವ, ರಾಜ್ಯದ/ರಾಷ್ಟ್ರದ ವೈಜ್ಞಾನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸುವ ಹಾಗೂ ಮೂಲ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹಾಗೂ ಚಿಂತನ ಕೌಶಲ್ಯವನ್ನು ವರ್ಧಿಸಬೇಕೆಂಬ ಉದ್ದೇಶದಿಂದ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಸಂಘಟಿಸುತ್ತಿದೆ.
ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಕರಾವಿಪದಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಡಿಸೆಂಬರ್ 4 ರೊಳಗಾಗಿ ಅಂಚೆ, ಕೋರಿಯರ್, ಇ-ಮೇಲೆ (krvp.info@gmail.com) ಅಥವಾ ವಾಟ್ಸಪ್ (ನಂ.9483549159) ಮೂಲಕ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಯುವ ವಿಜ್ಞಾನಿ ವಿಭಾಗ, ವಿಜ್ಞಾನ ಭವನ, ನಂ.24/2, 21ನೆ ಮುಖ್ಯರಸ್ತೆ, ಬನಶಂಕರಿ 2ನೆ ಹಂತ, ಬೆಂಗಳೂರು ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮೊದಲು ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಡಿ.14ರಂದು ಏಕಕಾಲದಲ್ಲಿ ಆಯೋಜಿಸಲಾಗುತ್ತದೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆಯುವ ವಿದ್ಯಾರ್ಥಿಗೆ 5ಸಾವಿರ ರೂ.ಹಾಗೂ ದ್ವಿತೀಯ ಬಹುಮಾನ ಪಡೆಯುವ ವಿದ್ಯಾರ್ಥಿಗೆ 3ಸಾವಿರ ರೂ.ಗಳ ನಗದು ಬಹುಮಾನ ನೀಡಲಾಗುತ್ತದೆ.
ಜಿಲ್ಲಾ ಹಂತದಲ್ಲಿ ನಗದು ಬಹುಮಾನದೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ 4 ಯುವ ವಿಜ್ಞಾನಿಗಳಿಗೆ ತಲಾ 10 ಸಾವಿರ ರೂ.ಗಳ ನಗದು ಬಹುಮಾನದೊಂದಿಗೆ ಸ್ಮರಣಿಕೆ ಮತ್ತು ಯುವ ವಿಜ್ಞಾನಿ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ರಾಜ್ಯ ಸಂಯೋಜಕಿ ಮೀನಾಕ್ಷಿ ಶಿವಾನಂದ ಕುಡಸೋಮಣ್ಣವರ ಮೊ: 7353 60666 ಇವರನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.