ಉತ್ತರ ಪ್ರದೇಶ: ಶಿಕ್ಷಕರ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ; ಹಲವರ ಬಂಧನ

Update: 2021-11-28 07:49 GMT

ಲಕ್ನೋ: ಉತ್ತರ ಪ್ರದೇಶದಲ್ಲಿ ಶಿಕ್ಷಕರಿಗೆ ರವಿವಾರ ನಡೆಸಲು ಉದ್ದೇಶಿಸಿದ್ದ ಪ್ರಮುಖ ಪ್ರವೇಶ ಪರೀಕ್ಷೆಯನ್ನು, ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. ಪ್ರಶ್ನೆಪತ್ರಿಕೆಗಳು ವಾಟ್ಸಪ್ ಗುಂಪುಗಳಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಹಲವು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆ (ಯುಪಿಟಿಇಟಿ), ರಾಜ್ಯಮಟ್ಟದ ಶಿಕ್ಷಕರ ಅರ್ಹತಾ ಪರೀಕ್ಷೆಯಾಗಿದ್ದು, ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಉನ್ನತ ಪ್ರಾಥಮಿಕ ಶಾಲೆಗಳಲ್ಲಿ ಬೋಧನೆ ಮಾಡುವ ಇಚ್ಛೆ ಹೊಂದಿದವರು ಈ ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯ. ಇದೀಗ ಪರೀಕ್ಷೆಯನ್ನು ಮುಂದಿನ ತಿಂಗಳು ನಡೆಸಲು ಉದ್ದೇಶಿಸಲಾಗಿದೆ. ರಾಜ್ಯಾದ್ಯಂತ ಲಕ್ಷಾಂತರ ಮಂದಿ ಇಂದಿನ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕಿತ್ತು.
ಯುಪಿ-ಟಿಇಟಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಮಾಹಿತಿ ಇದ್ದು, ಇದರಿಂದ ಪರೀಕ್ಷೆ ರದ್ದುಪಡಿಸಲಾಗಿದೆ. ಒಂದು ತಿಂಗಳ ಒಳಗಾಗಿ ಆಕಾಂಕ್ಷಿ ಶಿಕ್ಷಕರು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೇ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗುವುದು. ಈ ಸಂಬಂಧ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಲಾಗಿದೆ. ಪ್ರಕರಣದ ಬಗ್ಗೆ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಘಟಕಕ್ಕೆ ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಆರೋಪಿಗಳನ್ನು ಪತ್ತೆ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸತೀಶ್ ದ್ವಿವೇದಿ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಆದಿತ್ಯನಾಥ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆಪಾದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News