ಬಾಲ ಕಾರ್ಮಿಕ, ಕಿಶೋರ ಕಾರ್ಮಿಕ ಪದ್ಧ್ದತಿ ಬಗ್ಗೆ ಅರಿವು ಮೂಡಿಸಿ: ಡಿಸಿ ಕೂರ್ಮಾರಾವ್

Update: 2021-12-17 14:24 GMT

ಉಡುಪಿ, ಡಿ.17: ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ಯಿಂದಾಗಿ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಆಯೋಜಿಸು ವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧದ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲನಿಗಳಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಆಟೋ ಪ್ರಚಾರದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿರುವ ಪೋಷಕರ ಮನ ಮುಟ್ಟುವಂತೆ ಬೀದಿ ನಾಟಕಗಳ ಮೂಲಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಟೋ ಪ್ರಚಾರದ ಮೂಲಕ ಹಾಗೂ ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಈ ಕಾರ್ಯಕ್ರಮವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ತಲುಪಿಸಬೇಕು. ಜಿಲ್ಲೆಯಾದ್ಯಂತ 10 ದಿನಗಳ ಕಾಲ ನಡೆಸಲಾಗುವ ಈ ಆಟೋ ಪ್ರಚಾರ ಕಾರ್ಯಕ್ರಮ ಸಾಧ್ಯವಾದಷ್ಟು ಎಲ್ಲಾ ಕಾಲನಿಗಳಿಗೆ ತಲುಪುವಂತೆ ಯೋಜನೆ ರೂಪಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ಶೇಷಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನಗರಸಭೆ ಅಧ್ಯಕ್ಷೆ ಆರ್.ಸುಮಿತ್ರ ನಾಯಕ್, ನಗರಸಭೆ ಸದಸ್ಯೆ ಎನ್.ಜಯಲಕ್ಷ್ಮೀ, ಚೈಲ್ಡ್‌ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತಾ ಉಪಸ್ಥಿತರಿದ್ದರು.

ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್. ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News