ಉಡುಪಿ: ಬಾಲಕಿಗೆ ಮಾನಸಿಕ ಕಿರುಕುಳ, ಕೊಲೆ ಬೆದರಿಕೆ ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ, ದಂಡ

Update: 2021-12-18 14:51 GMT

ಉಡುಪಿ, ಡಿ.18: ಬಾಲಕಿಗೆ ಮದುವೆಯಾಗುವಂತೆ ಒತ್ತಾಯಿಸಿ, ಮಾನಸಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಒಡ್ಡಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2013ರ ಎಪ್ರಿಲ್ 6ರಂದು ಸಂಜೆ 4:30ರ ಸುಮಾರಿಗೆ ಉಡುಪಿ ತಾಲೂಕು ಕಡಿಯಾಳಿಯ ನಿವಾಸಿ ಮಧು ಎಂಬಾತನು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕಲ್ಸಂಕ ಬಳಿಯ ಬಡಗುಪೇಟೆಗೆ ಹೋಗುವ ರಸ್ತೆಯಲ್ಲಿ ಬಾಲಕಿಯನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಮದುವೆ ಮಾಡಿಕೊಡದಿದ್ದಲ್ಲಿ ಬಾಲಕಿ ಹಾಗೂ ಆಕೆಯ ತಾಯಿಯನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್‌ ಪ್ರಕಾಶ್ ಅವರು ಆರೋಪಿ ಮಧು ಎಂಬಾತನಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News