ಉಡುಪಿ: ನ್ಯಾಯಾಧೀಶರು, ವಕೀಲರು,ಕೋರ್ಟ್ ಸಿಬ್ಬಂದಿಯಿಂದ ಸ್ವಚ್ಛತಾ ಕಾರ್ಯಕ್ರಮ
ಉಡುಪಿ, ಜ.30: ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ನಗರಸಭೆ ಸಹಯೋಗದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ರವಿವಾರ ಉಡುಪಿ ನ್ಯಾಯಾಲಯಗಳ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಎರ್ಮಾಳ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ಶರ್ಮಿಲಾ ಎಸ್., ಹಿರಿಯ ಸಿವಿಲ್ ನ್ಯಾಯಾಧೀಶೆ ಶಕುಂತಲಾ, ಹಿರಿಯ ನ್ಯಾಯವಾದಿ ವೀಣಾ, ಗಣೇಶ್ ಮಟ್ಟು, ಹಿರಿಯ ವಕೀಲೆ ಅಮೃತ ಕಲಾ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ನ್ಯಾಯಾಧೀಶರು, ಹಿರಿಯ ಕಿರಿಯ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ನ್ಯಾಯಾಲಯ ಸಂಕೀರ್ಣದ ಮುಂಭಾಗ ಕಸ ಗುಡಿಸಿ, ಇಡಿ ವಠಾರವನ್ನು ಸ್ವಚ್ಛಗೊಳಿಸಿದರು.