ಉಡುಪಿ: ಬಾಕಿ ವೇತನಕ್ಕಾಗಿ ತಾಯಿ ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳಿಂದ ವಿನೂತನ ಪ್ರತಿಭಟನೆ
ಉಡುಪಿ, ಫೆ.23: ಮೂರು ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿ ನಡೆಸುತ್ತಿರುವ ಅಹೋ ರಾತ್ರಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ನೇತೃತ್ವದಲ್ಲಿ ಪಾತ್ರೆ ಪಗಡೆಗಳನ್ನು ಇಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೂಡಲೇ ಸಂಬಳ ಪಾವತಿಸುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲು ಹಳೆಯ ಪಾತ್ರೆ, ಪಗಡೆಗಳನ್ನು ಆಸ್ಪತ್ರೆಯ ಮುಂದೆ ಇಟ್ಟು ಸಿಬ್ಬಂದಿಗಳು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಮಾತನಾಡಿ, ಆಸ್ಪತ್ರೆಯ ಸಿಬ್ಬಂದಿಗೆ ಮೂರು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಅವರ ಬದುಕು ದುಸ್ತರವಾಗಿದ್ದು, ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಸಿಬ್ಬಂದಿಗೆ ತಕ್ಷಣವೇ ವೇತನ ಪಾವತಿ ಮಾಡಬೇಕು. ಇಲ್ಲದಿದ್ದರೆ, ಇನ್ನಷ್ಟು ಉಗ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಳೆದ ಮೂರು ದಿನಗಳಿಂದ ಆಸ್ಪತ್ರೆಯ ತುರ್ತು ಚಿಕಿತ್ಸೆ ಹಾಗೂ ಕೋವಿಡ್ ಲಸಿಕಾ ಕೇಂದ್ರ ಹೊರತುಪಡಿಸಿ, ಉಳಿದ ಒಳರೋಗಿ ಹಾಗೂ ಹೊರ ರೋಗಿ ಗಳ ವಿಭಾಗದ ಎಲ್ಲ ಸೇವೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಿ ವೈದ್ಯರು ಸೇರಿದಂತೆ ಒಟ್ಟು 153 ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ.