ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಡಿಸಿ ಕೂರ್ಮಾರಾವ್

Update: 2022-03-22 15:22 GMT

ಉಡುಪಿ : ಮುಂದಿನ ಮಾ.28ರಿಂದ ಎ.11ರವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೊಠಡಿ ಗಳಲ್ಲಿ  ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದಕ್ಕೆ ಮಹತ್ವ ನೀಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಪರೀಕ್ಷೆ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡುತಿದ್ದರು. 

ಜಿಲ್ಲೆಯ ೨೬೬ ಶಾಲೆಗಳ ೭೨೨೯ ಬಾಲಕರು, ೬೭೯೩ ಬಾಲಕಿಯರು ಸೇರಿ ದಂತೆ ಒಟ್ಟು ೧೪,೦೨೨ ಮಂದಿ ವಿದ್ಯಾರ್ಥಿಗಳು ಈ ಬಾರಿ ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದು, ಇವರಲ್ಲಿ ೧೩,೬೭೨ ಮಂದಿ ಹೊಸದಾಗಿ ಪರೀಕ್ಷೆ ಬರೆದರೆ,   ೨೯೮ ಮಂದಿ ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಕಳೆದ ಬಾರಿ ಅನುತ್ತೀರ್ಣ ರಾದವರೂ ಇವರಲ್ಲಿ ಸೇರಿದ್ದಾರೆ.  ಜಿಲ್ಲೆಯ ೫೮ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದರು. 

ಈ ಬಾರಿ ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ  ಪಡೆಯ ಬೇಕು ಎಂದ ಕೂರ್ಮಾರಾವ್, ಪರೀಕ್ಷಾ ಕೇಂದ್ರಕ್ಕೆ ಯಾವುದೇ ವಿದ್ಯಾರ್ಥಿಯೂ ಗೈರು ಹಾಜರಾಗದಂತೆ ಎಚ್ಚರವಹಿಸಬೇಕು ಎಂದರು. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಸಿಸಿಟಿವಿಗಳನ್ನು ಅಳವಡಿಸಬೇಕು. ಅವುಗಳ ಕಾರ್ಯ ನಿರ್ವಹಣೆ ಉತ್ತಮವಾಗಿರುವ ಬಗ್ಗೆ ಪರಿಶೀಲಿಸಿ ೨ ದಿನ ಮುಂಚಿತವಾಗಿ ವರದಿ ನೀಡಬೇಕು ಎಂದರು.

ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ನಿಗದಿತ ಕಾಲಕ್ಕೆ ಸರಿಯಾಗಿ ತಲುಪುವ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಪರೀಕ್ಷಾ  ಕೇಂದ್ರಗಳಿಗೆ ಅಗತ್ಯ ವಿರುವ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳುವ ಜೊತೆಯಲ್ಲಿ ಹೆಚ್ಚುವರಿ ಸಿಬ್ಬಂದಿ ಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸರಕಾರದ ಸೂಚನೆಯಂತೆ ಕೋವಿಡ್-೧೯ರ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಈ ಕಾರ್ಯಕ್ಕೆ ಅಗತ್ಯವಿರುವ ಇತರೆ ಇಲಾಖೆಗಳ ಸಹಕಾರವನ್ನು  ಪಡೆಯಬೇಕು.  ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ಪರೀಕ್ಷಾ ಕೇಂದ್ರ್ರದಲ್ಲಿ ನಿಯೋಜಿಸಲಾಗುವುದು ಎಂದರು.

ಪರೀಕ್ಷಾ ಕೇಂದ್ರದ ಸುತ್ತ ೨೦೦ಮೀ.ವ್ಯಾಪ್ತಿಯಲ್ಲಿ ಸಿಆರ್‌ಪಿಸಿ  ಸೆಕ್ಷನ್ 144ನ್ನು ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರದ ಸಮೀಪದ ಜೆರಾಕ್ಸ್ ಅಂಗಡಿ ಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗುವುದು ಎಂದ ಅವರು ಪರೀಕ್ಷಾ ಕೇಂದ್ರದ ಒಳಗೆ ಯಾರೊಬ್ಬರೂ ಮೊಬೈಲ್, ಕ್ಯಾಮರಾಗಳನ್ನು ಕೊಂಡೊಯ್ಯುವುದು ಮತ್ತು ಬಳಕೆ ಮಾಡುವುದನ್ನು  ಕಡ್ಡಾಯವಾಗಿ ನಿಷೇಧಿಸ ಲಾಗಿದೆ ಎಂದರು.

ಜಿಪಂನ ಸಿಇಓ ಡಾ.ನವೀನ್ ಭಟ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲ ವಾಗುವಂತೆ ಸಾರಿಗೆ ವ್ಯವಸ್ಥೆ ಲಭ್ಯವಾಗುವುವಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ಗಳನ್ನು ನೀಡಿದರು.

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಸುಗಮ ಹಾಗೂ ಪಾರದರ್ಶಕ ಪರೀಕ್ಷೆಯನ್ನು ನಡೆಸಲು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿ. ಅತ್ಯಂತ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಯಾವುದೇ ರೀತಿಯ ಗೊಂದಲ ಗಳಿಗೆ ಆಸ್ಪದ ನೀಡಬಾರದು. ಪರೀಕ್ಷಾ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿಡಲು ಎಚ್ಚರವಹಿಸಬೇಕು ಎಂದವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ಎಎಸ್ಪಿ ಸಿದ್ದಲಿಂಗಪ್ಪ, ಡಿಡಿಪಿಐ ಗೋವಿಂದ ಮಡಿವಾಳ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್, ಜಿಲ್ಲಾ ಖಜಾನಾಧಿಕಾರಿ ಗೋಪಾಲಕೃಷ್ಣ, ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News