ಮಾ. 28ರಂದು ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ ಪುರಸ್ಕಾರ ಪ್ರದಾನ
ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಲಜೀವನ್ ಮಿಷನ್ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲ ಇವರ ಸಹಯೋಗದಲ್ಲಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಹಾಗೂ ಉಪ ಸಮಿತಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಮತ್ತು ಉಡುಪಿ ಜಿಲ್ಲೆಯ ಅತ್ಯುತ್ತಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಪುರಸ್ಕಾರ ಕಾರ್ಯಕ್ರಮ ಸೋಮವಾರ ಮಣಿಪಾಲದಲ್ಲಿ ನಡೆಯಲಿದೆ.
ಮಣಿಪಾಲದ ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಗೋಲ್ಡನ್ ಜುಬಿಲಿ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಉದ್ಘಾಟಿಸಲಿದ್ದಾರೆ. ಅತ್ಯುತ್ತಮ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ ಪ್ರಶಸ್ತಿ ಯನ್ನು ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಶರ್ಮಿಳಾ, ಜಿಪಂನ ಯೋಜನಾ ನಿರ್ದೇಶಕ ಬಾಬು ಎಂ., ಕೆನರಾ ಬ್ಯಾಂಕ್ ವೃತ್ತ ಕಚೇರಿಯ ರಾಮ ನಾಯ್ಕ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.