‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಅಭಿಯಾನದಲ್ಲಿ ಸಚಿವ ಅಶೋಕ್ ಪಾಲ್ಗೊಂಡ ಕೊಕ್ಕರ್ಣೆ ಗ್ರಾಪಂಗೆ ಒಂದು ಕೋಟಿ ರೂ.

Update: 2022-04-26 14:00 GMT

ಉಡುಪಿ : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನದಡಿ ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಆಗಮಿಸಿ ಇಡೀ ದಿನದ ಕಾರ್ಯ ಕ್ರಮದಲ್ಲಿ ಭಾಗವಹಿಸಿದ ಕೊಕ್ಕರ್ಣೆ ಗ್ರಾಪಂಗೆ ಒಂದು ಕೋಟಿ ರೂ.ಗಳ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ.

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನದಲ್ಲಿ ಕಂದಾಯ ಸಚಿವರು  ಈವರೆಗೆ ಗ್ರಾಮ ವಾಸ್ತವ್ಯ ಮಾಡಿರುವ ಎಲ್ಲಾ ಜಿಲ್ಲೆಗಳ ಗ್ರಾಮಗಳ ಅಭಿವೃದ್ಧಿಗೆ ತಲಾ ಒಂದು ಕೋಟಿರೂ. ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದರಂತೆ ಕಂದಾಯ ಸಚಿವರು ಭಾಗವಹಿಸಿದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮಕ್ಕೆ, ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕುಂಟಕಣಿ ಗ್ರಾಮದ ಅಚವೆ ಗ್ರಾಮಕ್ಕೆ ತಲಾ ಒಂದು ಕೋಟಿ ರೂ.ನಂತೆ ಒಟ್ಟು ಮೂರು ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಅಲ್ಲದೇ ಇನ್ನು ಮುಂದೆ ಕಂದಾಯ ಸಚಿವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದಲ್ಲಿ ಭಾಗವಹಿಸಲು ಆಯ್ಕೆ ಮಾಡಿಕೊಳ್ಳುವ ತೀರಾ ಹಿಂದುಳಿದಿರುವ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಸಾರಿಗೆ, ಕುಡಿಯುವ ನೀರು, ಆರೋಗ್ಯ ಕೇಂದ್ರಗಳು, ಅಂಗನವಾಡಿ, ಸ್ಮಶಾನ, ಗುಡಿಸಲು ವಾಸಿಗಳಿಗೆ ಮನೆ ನಿರ್ಮಾಣ, ಒಳಚರಂಡಿ ವ್ಯವಸ್ಥೆ, ಶಾಲೆ ಮತ್ತು ಅಂಗನವಾಡಿ ದುರಸ್ತಿ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯ ಒದಗಿಸುವ ಸಲುವಾಗಿ ಪ್ರತಿ ತಿಂಗಳು ತಲಾ ಒಂದು ಕೋಟಿ ರೂ.ನಂತೆ ಒಟ್ಟು 12 ಕೋಟಿ ರೂ.ಗಳ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದರಂತೆ ಕೊಕ್ಕರ್ಣೆ ಗ್ರಾಪಂ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಒಂದು ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇದನ್ನು ಗ್ರಾಮದಲ್ಲಿ ರಸ್ತೆ, ಸಾರಿಗೆ, ಕುಡಿಯುವ ನೀರು, ಆರೋಗ್ಯ ಕೇಂದ್ರಗಳನ್ನು, ಅಂಗನವಾಡಿ, ಸ್ಮಶಾನ, ಗುಡಿಸಲು ವಾಸಿಗಳಿಗೆ ಮನೆ ನಿರ್ಮಾಣ, ಒಳಚರಂಡಿ ವ್ಯವಸ್ಥೆ, ಶಾಲಾ ಮತ್ತು ಅಂಗನವಾಡಿ ದುರಸ್ತಿಗಳಿಗೆ ಬಳಸಲಾಗುವುದು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News